ಬೆಂಗಳೂರು : ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಐಎಎಸ್ , ಐಪಿಎಸ್ ಅಧಿಕಾರಿಗಳ ಸಹಕಾರ ಹೆಚ್ಚು ಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭ ಕೋರಿ ಮಾತನಾಡಿದರು.
ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ಅಧಿಕಾರಿಗಳ ಸಹಕಾರ ಹೆಚ್ಚು ಬೇಕು. ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ ಪರವಾಗಿ ಇರುವುದಿಲ್ಲ. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳದೆ ಧೈರ್ಯದಿಂದ ಸಮಸ್ಯೆಗಳನ್ನು, ಸಂದರ್ಭಗಳನ್ನು ನಿರ್ವಹಿಸಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಆಡಳಿತಾಂಗದಲ್ಲಿ ಐಎಎಸ್, ಐಪಿಎಸ್, ಐಆರ್ಎಸ್ ಹಾಗೂ ಐಎಫ್ಎಸ್ ಅಧಿಕಾರಿಗಳ ಜವಾಬ್ದಾರಿ ಹೆಚ್ಚು. ನಾವು ಕಾನೂನುಗಳನ್ನು ರಚಿಸಿ, ಜಾರಿ ಆಗುವ ದಿಕ್ಕಿನಲ್ಲಿ ನಿರಂತರ ನಿಗಾ ವಹಿಸುತ್ತೇವೆ. ಅಧಿಕಾರಿ ವರ್ಗ ಸಮಾಜಕ್ಕೆ ಪೂರಕವಾಗಿ ಕ್ರಿಯಾಶೀಲತೆಯಿಂದ ಕರ್ತವ್ಯ ನಿರ್ವಹಿಸಬೇಕು. ಭಾರತದ ಆರ್ಥಿಕತೆ ಕುಸಿತ ಕಂಡಿದ್ದಾಗ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಮನಮೋಹನ್ ಸಿಂಗ್ ಅವರು ದೇಶದ ಆರ್ಥಿಕತೆಗೆ ಹೊಸ ಚೈತನ್ಯ ನೀಡಿದರು. ದೇಶದ ಆರ್ಥಿಕ ಬೆಳವಣಿಗೆ ಆಗಿ ಇದರ ಲಾಭ ದೇಶದ ಜನರಿಗೆ ಲಭಿಸುವಂತೆ ಮಾಡಿದರು. ಸಂವಿಧಾನದ ನಿರ್ದೇಶಕ ತತ್ವಗಳಾದ ಸಮಾನತೆ, ಜಾತ್ಯತೀತತೆ, ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ದೇಶದ ಜನರ ಮೂಲಭೂತ ಹಕ್ಕುಗಳನ್ನಾಗಿ ಮಾಡಿದರು. ಮಾಹಿತಿ ಹಕ್ಕು, ಆಹಾರದ ಹಕ್ಕು, ಶಿಕ್ಷಣದ ಹಕ್ಕುಗಳನ್ನು ಕಡ್ಡಾಯ ಮಾಡಿದರು. ಆ ಮೂಲಕ ಸಮಾನತೆಯೆಡೆಗೆ ದೇಶವನ್ನು ಮುನ್ನಡೆಸಿದರು. ಸಮಾನ ಅವಕಾಶಗಳು ಸಿಕ್ಕಾಗ ಸಮಾನತೆಯ ದಿಕ್ಕಿಗೆ ನಾವು ಸಾಗಬಹುದು ಎನ್ನುವ ಕಾರಣದಿಂದಲೇ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಜನರ ಕೈಯಲ್ಲಿ ಹಣ ಇರಬೇಕು, ಜನರ ಕೊಳ್ಳುವ ಶಕ್ತಿ ಹೆಚ್ಚಾಗಬೇಕು. ಇದಕ್ಕೆ ತಕ್ಕಂತೆ ರಾಜ್ಯದ ಜನರ ಜೇಬಿಗೆ ಹಣ ನೀಡುವ ಗ್ಯಾರಂಟಿಗಳನ್ನು ನಾವು ಜಾರಿ ಮಾಡಿದೆವು. ಮಧ್ಯವರ್ತಿಗಳ ಹಾವಳಿ ಇಲ್ಲದಂತೆ ನೇರವಾಗಿ ಜನರಿಗೆ ಹಣ ತಲುಪಿಸುತ್ತಿದ್ದೇವೆ. ಇದು ಇನ್ನಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಜವಾಬ್ದಾರಿ ನಿಮ್ಮೆಲ್ಲರ ಮೇಲಿದೆ. ಇಲ್ಲಿಯವರೆಗೂ 35 ಸಾವಿರ ಕೋಟಿ ರೂಪಾಯಿಗಳನ್ನು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಖರ್ಚು ಮಾಡಿದ್ದೇವೆ. ಈಗಲಾದರೂ ನಂಜುಂಡಪ್ಪ ಅವರ ವರದಿಯಲ್ಲಿನ ಪ್ರಾದೇಶಿಕ ಅಸಮಾನತೆ ಕಡಿಮೆಯಾಗಿದೆಯಾ ಎನ್ನುವುದನ್ನು ಅಧ್ಯಯನ ನಡೆಸಿ ವರದಿ ನೀಡಲು ಗೋವಿಂದರಾವ್ ಅವರ ಸಮಿತಿ ರಚಿಸಲಾಗಿದೆ. ಏಕೆ ಉತ್ತರ ಕರ್ನಾಟಕದ ಅಸಮಾನತೆ ಕಡಿಮೆ ಆಗಿಲ್ಲ ಎನ್ನುವ ಬಗ್ಗೆಯೂ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿದ್ದೇವೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ನೀವೂ ಅಷ್ಟೆ ಗಂಭೀರವಾಗಿ ಪರಿಗಣಿಸಿ ಪ್ರಾದೇಶಿಕ ಅಸಮತೋಲನ ತೊಡೆದು ಹಾಕಲು ಶ್ರಮಿಸಬೇಕು. ಯುವ ಜನತೆ ನಮ್ಮ ಸಮಾಜದ ಆಸ್ತಿ. ಇವರ ಭವಿಷ್ಯ ಹಾಳಾಗದಂತೆ ಎಚ್ಚರ ವಹಿಸುವ ಸವಾಲನ್ನು ಐಪಿಎಸ್ ಅಧಿಕಾರಿಗಳು ಸ್ವೀಕರಿಸಬೇಕು. ಡ್ರಗ್ಸ್ ಹಾವಳಿ, ಅಪರಾಧಿಕ ಜಗತ್ತಿನ ಕಡೆಗೆ ಯುವ ಜನತೆ ಆಕರ್ಷಿತರಾಗದಂತೆ ಎಚ್ಚರ ವಹಿಸಿ. ತಂತ್ರಜ್ಞಾನ ಮತ್ತು ವಿಜ್ಞಾನದ ಪ್ರಗತಿ ಆಗುತ್ತಿದೆ. ಈ ಪ್ರಗತಿ ಅಪರಾಧಗಳಿಗೆ ಬಳಕೆ ಆಗದೆ ಯುವ ಜನರ ಭವಿಷ್ಯ ರೂಪಿಸಲು ಸಹಕಾರಿ ಆಗುವಂತೆ ಕರ್ತವ್ಯ ನಿರ್ವಹಿಸಿ. ಅಧಿಕಾರಿ ವರ್ಗ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ರಾಜ್ಯದಲ್ಲಿ ಅದ್ಭುತ ಬದಲಾವಣೆ, ಸುಧಾರಣೆಗಳನ್ನು ತರಲು ಸಾಧ್ಯವಿದೆ. ಇದಕ್ಕಾಗಿ ನಿಮ್ಮ ಕಾರ್ಯಕ್ಷಮತೆ ಬಳಕೆಯಾಗಲಿ. ಅಧಿಕಾರಿ ವರ್ಗಕ್ಕೆ ನಮ್ಮ ಸಲಹೆಯ ಅಗತ್ಯ ಇಲ್ಲ. ನೀವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಂಡರೆ ಸಾಕು.
ಭ್ರಷ್ಟಾಚಾರ ವ್ಯವಸ್ಥೆ ಕಡಿಮೆ ಆಗುವ ಬದಲಿಗೆ ಹೆಚ್ಚಾಗುತ್ತಿರುವುದು ದುರಂತ. ಆದ್ದರಿಂದ ನಾವೆಲ್ಲರೂ ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಪ್ರಾಮಾಣಿಕವಾಗಿ ನಡೆದುಕೊಳ್ಳೋಣ. ನಮ್ಮ-ನಿಮ್ಮ ಉದ್ದೇಶ ಒಂದೇ. ಸಮಾಜದ ಪ್ರಗತಿ ಮತ್ತು ಆರೋಗ್ಯಕರ ಬದಲಾವಣೆ. ಇದಕ್ಕಾಗಿ ನಮ್ಮ ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳೋಣ. ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಸುಳ್ಳನ್ನು ಪದೇ ಪದೇ ಹರಡಿಸುತ್ತಿದ್ದಾರೆ. ಇದು ಸುಳ್ಳು ಎನ್ನುವುದು ನಿಮಗೇ ಗೊತ್ತಿದೆ. ಹಿಂದಿನ ಸರ್ಕಾರ ಬಜೆಟ್ ಒಪ್ಪಿಗೆ ಪಡೆಯದೆ ಯದ್ವಾ ತದ್ವಾ ಟೆಂಡರ್ ಕರೆದು ಹಾನಿ ಮಾಡಿತ್ತು. ಸುಮಾರು 39 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿ ಹೋಗಿದ್ದರು. ಜೊತೆಗೆ ಕೇಂದ್ರ ಸರ್ಕಾರದಿಂದ ನಮಗೆ ಅನ್ಯಾಯ ಮುಂದುವರೆದಿದೆ. ಇದೆಲ್ಲವನ್ನೂ ಸರಿದೂಗಿಸಿಕೊಂಡು ಅಭಿವೃದ್ಧಿಗೂ ಹಣ ಒದಗಿಸುತ್ತಿದ್ದೇವೆ. ಆದ್ದರಿಂದ ಇಲಾಖೆಗಳಲ್ಲಿರುವ ಹಣ ಹೆಚ್ಚು ಸೋರಿಕೆ ಆಗದಂತೆ ತಡೆಯುವ ಜವಾಬ್ದಾರಿ ಮತ್ತು ಕರ್ತವ್ಯ ಅಧಿಕಾರಿಗಳ ಮೇಲಿದೆ. ಹಣ ಸಂಗ್ರಹಿಸುವ ಇಲಾಖೆಗಳು ಮತ್ತು ಹಣ ಖರ್ಚು ಮಾಡುವ ಇಲಾಖೆಗಳೆರಡೂ ಸಮತೂಕದಿಂದ ಕರ್ತವ್ಯ ನಿರ್ವಹಿಸಬೇಕು. ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅತೀಕ್ ಅಹ್ಮದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಎಲ್ಲಾ ಹಿರಿಯ ಅಧಿಕಾರಿಗಳು, ಸಚಿವರಾದ ಜಮೀರ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಉಪಸ್ಥಿತರಿದ್ದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭ ಕೋರಿ ಮಾತನಾಡಿದೆ.
ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ಅಧಿಕಾರಿಗಳ ಸಹಕಾರ ಹೆಚ್ಚು ಬೇಕು.
ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ.… pic.twitter.com/Nq0BW8QlTh
— Siddaramaiah (@siddaramaiah) January 1, 2025