ಬೆಂಗಳೂರು : ಕೇರಳ ಸೇರಿದಂತೆ ದೇಶದ ವಿವಿಧೆಡೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ರಾಜ್ಯದಲ್ಲೂ ಈ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದ್ದು, ಸೋಂಕಿನ ಲಕ್ಷಣ ಹೊಂದಿರುವವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಡೆದ ಇಲಾಖೆ ಸಭೆಯಲ್ಲಿ ಈ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಕೇರಳದಲ್ಲಿ ಹೆಚ್ಚಾಗುತ್ತಿರುವ ಕೋವಿಡ್ ಪ್ರಕರಣಗಳು ಈಗಾಗಲೇ ಆತಂಕಕ್ಕೆ ಕಾರಣವಾಗಿದ್ದು, ಈಗ ರಾಜ್ಯದಲ್ಲಿ ಮೃತಪಟ್ಟಿರುವ ವ್ಯಕ್ತಿಯಲ್ಲಿ ಕೋವಿಡ್ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಕಾಸಸೌಧದಲ್ಲಿ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವುದಾಗಿ ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಿಗೆ ಕೋವಿಡ್ ಹತ್ತಿಕ್ಕಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಇನ್ನು ಆಕ್ಸಿಜನ್, ಬೆಡ್, ಔಷಧಿ ಹಾಗೂ ರೋಗಿಗಳ ಮಾಹಿತಿ ಪಡೆಯುವಂತೆ ಸಂಬಂಧಿಸಿದ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸಂದೇಶ ರವಾನೆ ಮಾಡಲಾಗಿದೆ ಎಂದರು.
ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಜನರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಉಪಯೋಗಿಸುವ ಮೂಲ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಪಾಲಿಸಿ ಎಂದು ವಿನಂತಿಸಿಕೊಂಡಿದ್ದಾರೆ.