ದಾವಣಗೆರೆ : ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸುವ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ನ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ ಡಿ.29 ರಂದು ನಡೆಯಲಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ.ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆಯ ಸಿದ್ದತಾ ಸಭೆ ಹಾಗೂ ಪರೀಕ್ಷಾ ಕೇಂದ್ರಗಳ ಪರಿವೀಕ್ಷಕರು, ಮಾರ್ಗಾಧಿಕಾರಿಗಳು ಮತ್ತು ವೀಕ್ಷಕರುಗಳಿಗೆ ಏರ್ಪಡಿಸಿದ ಸಭೆಯಲ್ಲಿ ಮಾತನಾಡಿದರು. ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ಮತ್ತು ಯಾವುದೇ ದೂರುಗಳು ಬಾರದಂತೆ ನಡೆಸಲು ಆಯೋಗದ ನಿರ್ದೇಶನಗಳನ್ನು ಪಾಲಿಸಿ, ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಚತೆ, ಆಸನದ ವ್ಯವಸ್ಥೆ, ಬಂದೋಬಸ್ತ್ ವ್ಯವಸ್ಥೆ ಸೇರಿದಂತೆ ಎಲ್ಲ ಸಿದ್ದತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ತಿಳಿಸಿದರು.
ಡಿ.29 ರಂದು ನಗರದ 19 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಒಟ್ಟು 8395 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು. ಪತ್ರಿಕೆ-1 ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಪತ್ರಿಕೆ-2 ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ಈ ಎರಡು ಪತ್ರಿಕೆಯ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.
ವಸ್ತ್ರ ಸಂಹಿತೆ ನಿಷೇಧಿತ ವಸ್ತುಗಳ ಪಟ್ಟಿ: ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಉದ್ದ ತೋಳಿನ ಉಡುಪು ಧರಿಸುವಂತಿಲ್ಲ. ಅರ್ಧ ತೋಳಿನ ಶರ್ಟ್ಗಳನ್ನು ಧರಿಸುವುದು. ಹೆಣ್ಣು ಮಕ್ಕಳು ಮಂಗಳಸೂತ್ರ ಹಾಗೂ ಕಾಲುಂಗುರ ಹೊರತುಪಡಿಸಿ ಬೇರೆ ಆಭರಣಗಳನ್ನು ಧರಿಸುವಂತಿಲ್ಲ.
ಪರೀಕ್ಷಾ ಕೇಂದ್ರಕ್ಕೆ ಯಾವುದೇ ನಿಷೇಧಿತ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಪೋನ್ಗಳು, ಪೆನ್ಡ್ರೈವ್ಗಳು, ಇಯರ್ ಪೋನ್ಗಳು, ಮೈಕ್ರೋ ಪೋನ್ಗಳು, ಬ್ಲೂಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.
ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ, ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಗಳು ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ. ತಲೆಯ ಮೇಲೆ ಟೋಪಿ ಧರಿಸಿಬಾರದು. ಯಾವುದೇ ರೀತಿಯ ಮಾಸ್ಕನ್ನು ಧರಿಸುವಂತಿಲ್ಲ.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳ ತಪಾಸಣಾ ಕಾರ್ಯಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜಿಸಿ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಬಂದೋಬಸ್ ವ್ಯವಸ್ಥೆ ಇರುತ್ತದೆ ಎಂದು ತಿಳಿಸಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಂಜುನಾಥ್, ಶಾಲಾ ಶಿಕ್ಷಣ ಇಲಾಖೆ ಡಿಡಿಪಿಐ ಕೊಟ್ರೇಶ್.ಜಿ, ಶಿಕ್ಷಣಾಧಿಕಾರಿ ರಾಜಶೇಖರ್ ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.