ಬೆಂಗಳೂರು : ರಾಜ್ಯದ ಜನತೆಗೆ ನೆಮ್ಮದಿ ಸುದ್ದಿಯೊಂದು ಸಿಕ್ಕಿದ್ದು, ಈ ಬಾರಿ ಬೇಸಿಗೆಯಲ್ಲಿ ಪವರ್ ಕಟ್ ಮಾಡದೇ ಇರಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹೌದು, ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸಜ್ಜಾಗಿದೆ. ರಾಜ್ಯದಲ್ಲಿ ಬೇಸಿಗೆ ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅವರು ವಿದ್ಯುತ್ ಉತ್ಪಾದನೆ, ಖರೀದಿ, ವಿನಿಮಯ ಮತ್ತು ಪ್ರಸರಣದ ಬಗ್ಗೆ ಕರ್ನಾಟಕ ವಿದ್ಯುತ್ ನಿಗಮ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್ ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ್ದಾರೆ.
ಸಮರ್ಪಕ ವಿದ್ಯುತ್ ಪೂರೈಕೆ ಜತೆಗೆ ಅಗತ್ಯ ಸಂದರ್ಭದಲ್ಲಿ ಹೆಚ್ಚು ವಿದ್ಯುತ್ ಉತ್ಪಾದನೆ ಮೂಲಕ ಬೇಡಿಕೆ ಮತ್ತು ಪೂರೈಕೆ ನಡುವೆ ಅಂತರ ಇಲ್ಲದಂತೆ ನೋಡಿಕೊಳ್ಳಬೇಕು. ಬೇಸಿಗೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೋಲಾರ್ ವಿದ್ಯುತ್ ಉತ್ಪಾದನೆ ಹೆಚ್ಚಾಗುತ್ತಿರುವುದರಿಂದ ಹಗಲು ವೇಳೆಯೇ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಬೇಕು. ಉಷ್ಣ ವಿದ್ಯುತ್ ಮತ್ತು ಜಲ ವಿದ್ಯುತ್ ಸ್ಥಾವರಗಳಲ್ಲಿ ಸಾಧ್ಯವಾದಷ್ಟು ರಾತ್ರಿ ವೇಳೆಯ ಬಳಕೆಗೆ ವಿದ್ಯುತ್ ಉತ್ಪಾದಿಸಬೇಕು ಎಂದರು.