ಬೆಳಗಾವಿ : ರಾಜ್ಯದಲ್ಲಿ ಎಂಬಿಬಿಎಸ್ ಮತ್ತು ಸ್ನಾತಕೋತ್ತರ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಗ್ರಾಮೀಣ ಮತ್ತು ನಗರ ಪ್ರದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ವರ್ಷ ಕಡ್ಡಾಯವಾಗಿ ಸೇವೆ ಸಲ್ಲಿಸಬೇಕು ಎಂಬ ನಿಯಮ ರದ್ದು ಮಾಡಲು ಅವಕಾಶ ಕಲ್ಪಿಸುವ “ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತರಬೇತಿ (ತಿದ್ದುಪಡಿ) ಮಸೂದೆ-2023’ಯನ್ನು ವಿಧಾನ ಪರಿಷತ್‌ನಲ್ಲಿ ಮಂಡಿಸಲಾಗಿದ್ದು, ಅಂಗೀಕಾರ ದೊರೆತಿದೆ.
ಈ ಕುರಿತು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗಿಂತ, ರಾಜ್ಯದಲ್ಲಿ ಎಂಬಿಬಿಎಸ್, ಸ್ನಾತಕೋತ್ತರ ಪದವಿ ಪಡೆದು ಹೊರಬರುತ್ತಿರುವವರ ಸಂಖ್ಯೆಯು ಹೆಚ್ಚಾಗಿದೆ. ಇವರೆಲ್ಲರಿಗೂ ಗ್ರಾಮೀಣ ಸೇವೆ ಕಡ್ಡಾಯಗೊಳಿಸಿರುವುದರಿಂದ ಸರಕಾರಕ್ಕೆ ಆರ್ಥಿಕ ಹೊರೆಯಾಗುತ್ತಿದೆ ಎಂದು ಹೇಳಿದ್ದಾರೆ.
ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮಿತಿಗೊಳಿಸಿ ಸರ್ಕಾರಿ ಸೇವೆಗೆ ಸೇರಿಸಲು ಈ ತಿದ್ದುಪಡಿಯಿಂದ ಅವಕಾಶ ಸಿಗಲಿದೆ ಎಂದು ತಿಳಿಸಿದ್ದಾರೆ.