ಬೆಂಗಳೂರು : ಡಿಸೆಂಬರ್ 9ರ ಶನಿವಾರ ರಾಜ್ಯಾದ್ಯಂತ ನಡೆಸಿದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಬರೋಬ್ಬರಿ 25 ಲಕ್ಷ ಪ್ರಕರಣಗಳನ್ನು ರಾಜಿ ಸಂದಾನದ ಮೂಲಕ ಇತ್ಯರ್ಥಪಡಿಸಿದ್ದು, ಒಟ್ಟು1,569 ಕೋಟಿ ರೂ. ಪರಿಹಾರವನ್ನು ಕಕ್ಷಿದಾರರಿಗೆ ನೀಡಲಾಗಿದೆ ಎಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರ ಹೈಕೋರ್ಟ್ ಮೂರು ಪೀಠಗಳು ಸೇರಿದಂತೆ ರಾಜ್ಯಾದ್ಯಂತ 1,022 ಪೀಠಗಳು ಅದಾಲತ್ ನಡೆಸಿದ್ದವು. ಈ ವೇಳೆ ನ್ಯಾಯಾಲಯದಲ್ಲಿ ಬಾಕಿ ಇದ್ದ 2,24,080 ಪ್ರಕರಣಗಳು ಹಾಗೂ 22,90,263 ವಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು 25,14,342 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಒಟ್ಟು 1,358ವೈವಾಹಿಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿ 262 ದಂಪತಿಗಳು ಮತ್ತೆ ಒಂದುಗೂಡಿಸಲಾಗಿದೆ. ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳಲ್ಲಿ 4,031 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದ್ದು, ಒಟ್ಟು 209 ಕೋಟಿ ರೂ.ಗಳನ್ನು ಸಂತ್ರಸ್ತರಿಗೆ ನೀಡಲಾಗಿದೆ. 88 ಗ್ರಾಹಕರ ವ್ಯಾಜ್ಯಗಳ ಪ್ರಕರಣದಲಿ 2.47 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ಹೇಳಿದ್ದಾರೆ.