ಚಂಡೀಗಢ: ಹರಿಯಾಣದ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಅಕ್ಟೋಬರ್ 17 ರಂದು ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಪಂಚಕುಲದಲ್ಲಿ ನಡೆಯಲಿರುವ ಮೆಗಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿಯ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.
ಹರಿಯಾಣದ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಚಂಡೀಗಢ ಸಮೀಪದ ಪಂಚಕುಲದಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಈಗಾಗಲೇ ಸಿದ್ಧತೆಗಳು ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದ ವ್ಯವಸ್ಥೆಗಳ ಮೇಲ್ವಿಚಾರಣೆಗಾಗಿ ರಾಜ್ಯ ಮುಖ್ಯ ಕಾರ್ಯದರ್ಶಿ 10 ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಈ ಸಮಿತಿಯ ನೇತೃತ್ವವನ್ನು ಪಂಚಕುಲ ಜಿಲ್ಲಾಧಿಕಾರಿ ವಹಿಸಲಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಇತರ ಉನ್ನತ ನಾಯಕರು ಭಾಗವಹಿಸುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಸತತ ಮೂರನೇ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೇರಿದೆ. ಒಟ್ಟು 90 ಸ್ಥಾನಗಳಲ್ಲಿ 48 ಅನ್ನು ಗೆಲ್ಲುವ ಮೂಲಕ ಇತಿಹಾಸ ಬರೆದಿದೆ. ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ 37 ಸ್ಥಾನ, ಭಾರತೀಯ ರಾಷ್ಟ್ರೀಯ ಲೋಕದಳ ಎರಡು ಸ್ಥಾನಗಳನ್ನು ಗೆದ್ದುಕೊಂಡಿದೆ. ಚುನಾಯಿತರಾದ ಮೂವರು ಸ್ವತಂತ್ರ ಅಭ್ಯರ್ಥಿಗಳು ಕೂಡ ಬಿಜೆಪಿಗೆ ಬೆಂಬಲ ನೀಡಿದ್ದಾರೆ.