ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಹಿರಿಯ ಪೊಲೀಸ್ ಅಧಿಕಾರಿಗಳ ಮಂಪರು ಪರೀಕ್ಷೆ ಮಾಡಬೇಕು. ಆಗ ಸತ್ಯಾಸತ್ಯತೆ ಹೊರಬರಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿರುವ ನೇಮಕಾತಿ ವಿಭಾಗದ ಎ.ಡಿ.ಜಿ.ಪಿ ಯಾಗಿದ್ದ ಅಮೃತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಯಾರೆಲ್ಲ ರಾಜಕಾರಣಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗಲಿದೆ. “ಉಪ್ಪು ತಿಂದವರು ನೀರು ಕುಡಿಯಲಿ” ಎಂದು ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಪಿಎಸ್ಐ ನೇಮಕಾತಿ ‘ಅಕ್ರಮದಲ್ಲಿ ಅನೇಕ ಸಚಿವರು, ಅವರ ಆಪ್ತರು ಶಾಮೀಲಾಗಿರುವ ಸಂದೇಹಗಳಿವೆ. ಈ ಬಗ್ಗೆ ಸ್ಪಷ್ಟ ಮಾಹಿತಿ ಹೊರಬೀಳಬೇಕು ಎಂದರೆ ಪ್ರಮುಖ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಹಾಗೂ ಅಮೃತ್ ಪೌಲ್ ಬರೆದ ಡೈರಿಯ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.’