ಬೆಂಗಳೂರು : ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕ ಜಾರಿಗೆ ರಾಜ್ಯ ಸರ್ಕಾರವು ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಪ್ರಾಧಿಕಾರ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಬಿಬಿಎಂಪಿ ಮಟ್ಟದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
5 ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಮೇಲ್ವಿಚಾರಣೆಗೆ ರಾಜ್ಯ ಮಟ್ಟದ ಕಾರ್ಯವ್ಯವಸ್ಥೆಯನ್ನು ಜಾರಿಗೆ ತರುವ ಅವಶ್ಯಕತೆಯನ್ನು ಸರ್ಕಾರವು ಮನಗಂಡು, ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಅಗತ್ಯ ನೀತಿ, ಸುಧಾರಣೆಗಳು, ಅನುಷ್ಠಾನದ ವಿಧಾನಗಳಲ್ಲಿ ಸರಳೀಕರಣ ತರಲು ಹಾಗೂ ತಳಮಟ್ಟದಲ್ಲಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮಾನ್ಯ ಮುಖ್ಯಮಂತ್ರಿಯವರು ಮೇಲೆ ಓದಲಾದ ದಿನಾಂಕ: 17/01/2024ರ ಟಿಪ್ಪಣಿ ಮೂಲಕ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನ ಪ್ರಾಧಿಕಾರಗಳನ್ನು ಮತ್ತು ತಾಲ್ಲೂಕು ಮಟ್ಟದಲ್ಲಿ ಅನುಷ್ಠಾನ ಸಮಿತಿಗಳನ್ನು ರಚಿಸಲು ಸೂಕ್ತ ಆದೇಶ ಹೊರಡಿಸುವಂತೆ ನಿರ್ದೇಶನ ನೀಡಿರುತ್ತಾರೆ.
ನಿಟ್ಟಿನಲ್ಲಿ, ಸರ್ಕಾರವು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗಾಗಿ ಸಾಂಸ್ಥಿಕ ಕಾರ್ಯವಿಧಾನಗಳನ್ನು ಜಾರಿಗೆ ತರಲು ನಿರ್ಣಯಿಸಿ, ರಾಜ್ಯ ಮಟ್ಟದಲ್ಲಿ ‘ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’, ಜಿಲ್ಲಾ ಮಟ್ಟದಲ್ಲಿ ‘ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’ .ತಾಲ್ಲೂಕು ಮಟ್ಟದಲ್ಲಿ ‘ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ’ ಹಾಗೂ ಬಿ.ಬಿ.ಎಂ.ಪಿ. ಮಟ್ಟದಲ್ಲಿ “ಬಿ.ಬಿ.ಎಂ.ಪಿ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ” ಗಳನ್ನು ರಚಿಸಲು ಸರ್ಕಾರವು ನಿರ್ಧರಿಸಿ ಆದೇಶಿಸಿದೆ.