ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿಯಾದ ಶಕ್ತಿ ಯೋಜನೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಜಾರಿಗೊಳಿಸಲಾದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಸ್ಥಗಿತಗೊಳಿಸುವ ಕುರಿತು ಅನುಮಾನ ವ್ಯಕ್ತವಾಗಿದೆ.
ಶಕ್ತಿ ಯೋಜನೆ ಮುಂದುವರಿಸುವ ಬಗ್ಗೆ ಮರುಪರಿಶೀಲನೆ ನಡೆಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ವೋಲ್ವೋ ಬಸ್ ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ, ಶಕ್ತಿ ಯೋಜನೆ ಬಗ್ಗೆ ಮರು ಚಿಂತನೆ ನಡೆಸುವಂತೆ ಮಹಿಳೆಯರಿಂದಲೇ ಒತ್ತಡವಿದೆ. ಅನೇಕ ಹೆಣ್ಣು ಮಕ್ಕಳು ನಮಗೆ ಟಿಕೆಟ್ ಕೊಳ್ಳುವಂತಹ ಶಕ್ತಿ ಇದೆ. ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ನಮಗೆ ಉಚಿತ ಪ್ರಯಾಣ ಬೇಡವೆಂದು ಹೇಳಿದ್ದಾರೆ.
ಅನೇಕರು ಟ್ವೀಟ್ ಮತ್ತು ಇ-ಮೇಲ್ ಮೂಲಕ ಈ ಬಗ್ಗೆ ತಿಳಿಸುತ್ತಿರುವುದಾಗಿ ಡಿಸಿಎಂ ಹೇಳಿದ್ದಾರೆ. ಅನುಕೂಲಸ್ತ ಸ್ಥಿತಿಯಲ್ಲಿರುವ ಶೇಕಡ 5-10ರಷ್ಟು ಹೆಣ್ಣು ಮಕ್ಕಳು ಈ ಬಗ್ಗೆ ಹೇಳುತ್ತಿದ್ದು, ನಾವು ಹಣ ನೀಡಿ ಟಿಕೆಟ್ ಪಡೆದುಕೊಳ್ಳಲು ಮುಂದಾದರೂ, ಹಣ ಪಡೆದುಕೊಳ್ಳುತ್ತಿಲ್ಲ. ಸಾರಿಗೆ ಸಂಸ್ಥೆ ಬಸ್ಗಳಲ್ಲಿ ನಿರ್ವಾಹಕರು ಹಣ ಪಡೆದು ಟಿಕೆಟ್ ಕೊಡುತ್ತಿಲ್ಲ ಎಂದು ಮಹಿಳೆಯರು ನಮಗೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಶಕ್ತಿ ಯೋಜನೆ ಮರುಪರಿಶೀಲಿಸುವ ಬಗ್ಗೆ ಚರ್ಚೆ ಮಾಡುತ್ತೇವೆ. ಶೀಘ್ರವೇ ಸಾರಿಗೆ ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಶಕ್ತಿ ಯೋಜನೆ ಮರುಪರಿಶೀಲನೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.