ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗವರ್ನರ್ ಅವರಿಂದ ನಾಮನಿರ್ದೇಶನಗೊಂಡ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನಿರಾಕರಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಮುಂದಿನ 24 ಗಂಟೆಯಲ್ಲೇ ದೆಹಲಿ ಮೇಯರ್, ಉಪಮೇಯರ್ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಆದೇಶ ನೀಡಿದೆ.
ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಗೊಂದಲವಾಗಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿತ್ತು.
ಬಿಜೆಪಿ ನಾಯಕರನ್ನು ಮೇಯರ್ ಸ್ಥಾನಕ್ಕೆ ಆಯ್ಕೆ ಮಾಡುವ ಮೂಲಕ ನಾಗರಿಕ ಸಂಸ್ಥೆಯನ್ನು ವಶಪಡಿಸಿಕೊಳ್ಳಲು ಬಿಜೆಪಿ ಪ್ರಯತ್ನಿಸಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದ್ದು, ಎರಡು ತಿಂಗಳ ಅವಧಿಯಲ್ಲಿ ಮೇಯರ್ ಚುನಾವಣೆಯನ್ನು ಮೂರು ಬಾರಿ ಮುಂದೂಡಲಾಗಿದೆ. ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಅಥವಾ MCD ಗೆ ಡಿಸೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ AAP ಬಿಜೆಪಿಗಿಂತ ಹೆಚ್ಚು ಸ್ಥಾನಗಳನ್ನು ಗೆದ್ದಿತ್ತು.
ಲೆಫ್ಟಿನೆಂಟ್ ಗವರ್ನರ್ ನೇಮಕ ಮಾಡಿರುವ ದಿಲ್ಲಿಯ ನಾಗರಿಕ ಮಂಡಳಿಯ ಸದಸ್ಯರು ಮೇಯರ್ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ. ಈ ಆದೇಶ ಮೇಯರ್ ಆಯ್ಕೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ನಡುವಿನ ಜಗಳಕ್ಕೆ ಅಂತ್ಯ ಹಾಡಬಹುದು ಎನ್ನಲಾಗಿದೆ.