ರಾಮನಗರ: ‘ಬಿಗ್ ಬಾಸ್’ ರಿಯಾಲಿಟಿ ಶೋ ಬಗ್ಗೆ ತನಿಖೆ ನಡೆಸಲಾಗುವುದು ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.
‘ಬಿಗ್ ಬಾಸ್’ ರಿಯಾಲಿಟಿ ಶೋನಲ್ಲಿ ಸ್ವರ್ಗ ನರಕದ ವಿಚಾರವಾಗಿ ಮಹಿಳೆಯರ ವಿರುದ್ಧದ ಹೇಳಿಕೆ ಬಗ್ಗೆ ಸಂಪೂರ್ಣ ವರದಿ ತಯಾರಿಸಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಸಲ್ಲಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ರಾಮೋಹಳ್ಳಿ ಸಮೀಪ ನಡೆಯುತ್ತಿರುವ ‘ಬಿಗ್ ಬಾಸ್’ ಶೋ ಕುರಿತಾಗಿ ಕೆಲವು ಸಂಘಟನೆಗಳು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಮನವಿ ನೀಡಿದ ಹಿನ್ನೆಲೆಯಲ್ಲಿ ಅಧ್ಯಕ್ಷರು ಪತ್ರ ಬರೆದು ತನಿಖೆ ನಡೆಸಿ ವರದಿ ಸಲ್ಲಿಸಲು ತಿಳಿಸಿದ್ದಾರೆ. ಅಂತೆಯೇ ಸಂಪೂರ್ಣ ತನಿಖೆ ನಡೆಸಿ ವರದಿ ತಯಾರಿಸಿ ಮಹಿಳಾ ಆಯೋಗದ ಅಧ್ಯಕ್ಷರಿಗೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.