ಚಾಮರಾನಗರ : ತಮಿಳುನಾಡಿಗೆ ಮತ್ತೆ 3,000 ಕ್ಯೂಸೆಕ್ ಕಾವೇರಿ ನೀರು ಹಂಚಿಕೆ ಸಂಬಂಧ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ಮತ್ತೆ 3,000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿದೆ. ಆದರೆ ರೈತರ ಬೆಳೆಗಳಿಗೆ ನೀರು ಇಲ್ಲ. ಹೀಗಾಗಿ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.
ನಮ್ಮ ಬಳಿ ನೀರು ಇಲ್ಲ. ಕಾನೂನು ತಜ್ಞರ ಬಳಿ ಸಲಹೆ ಪಡೆದಿದ್ದೇವೆ. ಕಾವೇರಿ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಕಾವೇರಿ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದರು.
ಕಾವೇರಿ ನೀರು ಬಿಡುಗಡೆ ಸಂಬಂಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ನಿನ್ನೆ ಬೆಂಗಳೂರು ಬಂದ್ ಮಾಡಿದ್ದರು. ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ನಡುವೆ ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತೆ ಪ್ರತಿನಿತ್ಯ 3,000 ನೀರು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.