ಬೆಂಗಳೂರು: 541 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳ ನೇಮಕಾತಿಗೆ ಮರು ಪರೀಕ್ಷೆ ನಡೆಸುವುದಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಮುಂದುವರಿಸಿದೆ.
ನ್ಯಾಯಮೂರ್ತಿ ಪಿ.ದಿನೇಶ್ ಕುಮಾರ್ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ಮುಂದುವರಿಸಿ ವಿಚಾರಣೆಯನ್ನು ಆಗಸ್ಟ್ 16ಕ್ಕೆ ಮುಂದೂಡಿತು.
2021 ರಲ್ಲಿ 545 ಪಿಎಸ್‌ಐಗಳ ಹುದ್ದೆಗಳನ್ನು ಭರ್ತಿ ಮಾಡಲು ನಡೆದ ನೇಮಕಾತಿ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಉತ್ತರ ಪತ್ರಿಕೆಗಳನ್ನು ತಿರುಚಿರುವುದು ಬಹಿರಂಗವಾಗಿತ್ತು. ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 52 ಅಭ್ಯರ್ಥಿಗಳನ್ನು ಅಧಿಕಾರಿಗಳು ಡಿಬಾರ್ ಮಾಡಿದ್ದಾರೆ.
545 ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಏಕ ಸದಸ್ಯ ತನಿಖಾ ಆಯೋಗವನ್ನು ನೇಮಿಸಿ ಆದೇಶ ಹೊರಡಿಸಲಾಗಿತ್ತು. 545 ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು 3 ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸುವಂತೆ ಸರ್ಕಾರ ಸೂಚಿಸಿತ್ತು.
ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿ, ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಅಭ್ಯರ್ಥಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 30 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.