ಬೆಂಗಳೂರು : 1 ನೇ ತರಗತಿ ಶಾಲಾ ಪ್ರವೇಶಕ್ಕೆ ಮಕ್ಕಳಿಗೆ 6 ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ ಆರು ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
2025-26ನೇ ಸಾಲಿಗೆ ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ ಆರು ವರ್ಷ ತುಂಬಿರಬೇಕು ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅನಿಕೇತ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಪುತ್ರಿಗೆ ಎಲ್‌ಕೆಜಿಗೆ ದಾಖಲಿಸಲು ಅನುಮತಿ ನೀಡಬೇಕೆಂದು ಕೋರಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ, ಸರ್ಕಾರದ ಅಧಿಸೂಚನೆ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿದೆ. ಇದರ ಹಿಂದೆ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ ಕೇಂದ್ರಿತ ಉದ್ದೇಶವಿದೆ. ತಜ್ಞರ ವರದಿ ಆಧರಿಸಿದ ನೀತಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.
ಬೆಂಗಳೂರಿನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ತಿಷಿಕಾಳನ್ನು ಪ್ರಸಕ್ತ ವರ್ಷ ಎಲ್‌ಕೆಜಿಗೆ ಸೇರ್ಪಡೆ ಮಾಡಿಕೊಳ್ಳುವಂತೆ ಅನಿಕೇತ್ ಕೋರಿದ್ದರು. ಆದರೆ, 2023ರ ಜೂನ್ 1ಕ್ಕೆ ಸರಿಯಾಗಿ ತಿಷಿಕಾ ನಾಲ್ಕು ವರ್ಷ ಪೂರ್ಣಗೊಳಿಸದಿರುವುದರಿಂದ ಸರ್ಕಾರದ ಮಾರ್ಗಸೂಚಿಯಂತೆ ಆಕೆ ಎಲ್‌ಕೆಜಿಗೆ ಪ್ರವೇಶ ಪಡೆಯಲು ಅರ್ಹಳಲ್ಲ ಎಂದು ಶಾಲೆ ಹೇಳಿತ್ತು. ಈ ಹಿನ್ನೆಲೆಯಲ್ಲಿ ಅನಿಕೇತ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಸದ್ಯ ಹೈಕೋರ್ಟ್ ಅರ್ಜಿಯ ವಿಚಾರಣೆ ನಡೆಸಿದ್ದು, 2025-26ನೇ ಸಾಲಿನಿಂದ ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ ಆರು ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.