
ಬೆಂಗಳೂರು : ಸಾರ್ವಜನಿಕರು ಸಣ್ಣ ಪುಟ್ಟ ಸಮಸ್ಯೆಗಳನ್ನು ಹೊತ್ತು ಕಚೇರಿಗಳಿಗೆ ಪದೇ ಪದೇ ಅಲೆದಾಡುವುದನ್ನು ತಪ್ಪಿಸಲು ಮುಖ್ಯಮಂತ್ರಿಗಳ ಆಶಯದಂತೆ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ಸಿಕ್ಕಿದ್ದು, ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ 29 ಜಿಲ್ಲೆಗಳಲ್ಲೂ ಜನತಾ ದರ್ಶನ ಕಾರ್ಯಕ್ರಮ ಯಶಸ್ವಿಯಾಗಿದೆ.
ರಾಜ್ಯಾದ್ಯಂತ ಸೋಮವಾರ ಸಂಜೆ 6 ಗಂಟೆಗೆ ಲಭ್ಯವಾಗಿರುವ ಅಂಕಿ, ಅಂಶಗಳ ಪ್ರಕಾರ 6,700 ಮಂದಿ ಲಿಖಿತ ಅಹವಾಲುಗಳನ್ನು ಸಲ್ಲಿಸಿದ್ದು, 21 ಅಹವಾಲುಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಾಗಿದೆ. ಇವುಗಳಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಅಹವಾಲುಗಳೇ 2,100 ರಷ್ಟಿವೆ. ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು 700 ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ. ಉಳಿದಂತೆ ಮೌಖಿಕ ಅಹವಾಲು ಸಲ್ಲಿಸಿ ಪರಿಹಾರ ಪಡೆದಿರುವ ಪ್ರಕರಣಗಳನ್ನು ಸೇರಿಸಿಲ್ಲ ಎಂದು ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಈಗಾಗಲೇ ನಾಲ್ಕು ತಿಂಗಳನ್ನು ಪೂರೈಸಿದೆ. ಆಡಳಿತ ಚುರುಕುಗೊಳಿಸಲು ಜನರ ಸಂಕಷ್ಟಗಳಿಗೆ ಸ್ಪಂದಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸ್ಪಷ್ಟ ಸಂದೇಶ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಪ್ರತಿ ತಿಂಗಳು ಜನತಾದರ್ಶನ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು ಹಾಗೂ ಜನತಾ ದರ್ಶನದಲ್ಲಿ ಸರ್ಕಾರದ ಯೋಜನೆಗಳ ಕುರಿತು ಅರಿವು ಮೂಡಿಸಬೇಕು. ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯುವಂತಾಗಬೇಕು. ಕಂದಾಯ ಇಲಾಖೆಯ ಫೌತಿಖಾತೆಯನ್ನು ಅಂದೋಲನ ರೀತಿಯಲ್ಲಿ ಕೈಗೊಳ್ಳಲು ಸಿದ್ದತೆ ಮಾಡಿಕೊಳ್ಳಲಾಗಿದೆ