ಬೆಂಗಳೂರು : ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬೆಳೆಹಾನಿಯಾಗಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲೇ ಬರ ಪೀಡಿತ ತಾಲೂಕುಗಳ ಪಟ್ಟಿಯನ್ನು ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.
ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಆಗಸ್ಟ್ ತಿಂಗಳಿನಲ್ಲಿ ಹೆಚ್ಚಿನ ಮಳೆ ಬೀಳುವ ವಿಶ್ವಾಸವಿತ್ತು. ಆದರೆ ಈ ಆಗಸ್ಟ್ ನಲ್ಲಿ ಶೇ.99ರಷ್ಟು ಮಳೆ ಕೊರತೆಯಾಗಿದೆ. 130 ತಾಲೂಕಿನಲ್ಲಿ ಬರ ಸ್ಥಿತಿ ಕುರಿತು ವರದಿ ಸಲ್ಲಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ತೀವ್ರ ಬರಪೀಡಿತ ತಾಲೂಕುಗಳ ಆಯ್ದ ಗ್ರಾಮಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಂಟಿ ಬೆಳೆ ಪರಿಸ್ಥಿತಿ ಸಮೀಕ್ಷೆ ಪೂರ್ಣಗೊಂಡಿದೆ. ಆಗಸ್ಟ್ 30 ರಂದು ವರದಿಯೂ ಸಲ್ಲಿಕೆಯಾಗಿದೆ. ಈ ಮಾನದಂಡಗಳ ಆಧಾರದ ಮೇಲೆ ಸೆಪ್ಟೆಂಬರ್ 4 ರಂದು ಸಚಿವ ಸಂಪುಟ ಉಪಸಮಿತಿ ಸಭೆ ನಡೆಸಿ ಬರ ತಾಲೂಕುಗಳ ಪಟ್ಟಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.