ಬೆಂಗಳೂರು : 2024-25 ಸಾಲಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪದವಿ ಪೂರ್ವ ವಿಭಾಗದಲ್ಲಿ ವಿಜ್ಞಾನ ಮತ್ತು ವಾಣಿಜ್ಯ ಕೋರ್ಸ್ ಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ಮೊರಾರ್ಜಿ ಶಾಲೆಗಳ ಪದವಿ ಪೂರ್ವ ವಿಭಾಗದಲ್ಲಿ ವಿಜ್ಞಾನ ಮತ್ತು ವಾಣಿಜ್ಯ ಕೋರ್ಸ್ ಆರಂಭಿಸುವ ಕುರಿತಂತೆ 2019-20 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನೂ ಸಲ್ಲಿಸಲಾಗಿದ್ದು, 2024-25 ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಮೊರಾರ್ಜಿ ಶಾಲೆಗಳಲ್ಲಿ ಸೈನ್ಸ್ ಮತ್ತು ಕಾಮರ್ಸ್ ಕೋರ್ಸ್ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.