ಬೆಂಗಳೂರು : ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಶಿಕ್ಷಣ ಇಲಾಖೆ ಮುಂದಾಗಿದ್ದು, ನವೆಂಬರ್ 4 ರಿಂದ 7 ದಿನಗಳ ಕಾಲ ಸಮೀಕ್ಷೆ ನಡೆಸುವಂತೆ ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಆರ್.ಟಿ.ಇ. ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಯಾವ ಮಗುವೂ ಶಿಕ್ಷಣದಿಂದ ವಂಚಿರಾಗದಂತೆ ಎಲ್ಲಾ ನಾಗರೀಕರು, ಜನಪ್ರತಿನಿಧಿಗಳು ಹಾಗೂ ಸರ್ಕಾರದ ಪ್ರತಿನಿಧಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲಾ ವ್ಯಾಪ್ತಿಗೆ ಕರೆತರುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವಾಗಿರುತ್ತದೆ.
ಪ್ರಾಥಮಿಕ ಶಿಕ್ಷಣ ಸಾರ್ವತ್ರೀಕರಣದ ಹಿನ್ನೆಲೆಯಲ್ಲಿ ಯಾವುದೇ ಅರ್ಹ ವಯಸ್ಸಿನ ಮಗು ಶಿಕ್ಷಣದಿಂದ ವಂಚಿತರಾಗಬಾರದು. ಎಲ್ಲಾ ಮಕ್ಕಳನ್ನು ಶಿಕ್ಷಣ ವ್ಯಾಪ್ತಿಯಲ್ಲಿರುವಂತೆ ಮಾಡಲು ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ. ಹಲವಾರು ಕಾರಣಗಳಿಂದ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ “ಸಮಗ್ರ ಶಿಕ್ಷಣ ಕರ್ನಾಟಕ’ದ ವತಿಯಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಈ ರೀತಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣ ಮುಖ್ಯವಾಹಿನಿಗೆ ತರುವ ಸಲುವಾಗಿ ಮಕ್ಕಳನ್ನು ಗುರುತಿಸಲು ವಿಶೇಷ ಗಣತಿಯನ್ನು ಮಾಡಬೇಕಾಗಿದೆ. ಯಾವುದೇ ಮಗು ಈ ಗಣತಿಯ ವ್ಯಾಪ್ತಿಯಿಂದ ಹೊರಗುಳಿಯದಂತೆ ಗಣತಿ ಕಾರ್ಯವನ್ನು ನಿರ್ವಹಿಸಬೇಕಾಗುತ್ತದೆ.