ಬೆಂಗಳೂರು : ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಏಕರೂಪ ಪರೀಕ್ಷೆ ವೇಳಾಪಟ್ಟಿ, ಪರೀಕ್ಷೆ ಶುಲ್ಕ ಸೇರಿದಂತೆ ಏಕರೂಪ ನೀತಿ ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದ್ದಾರೆ.
ವಿಶ್ವವಿದ್ಯಾಲಯಗಳ ಕುಲಸಚಿವರ ಜೊತೆಗೆ ನಡೆದ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಡಾ.ಎಂ.ಸಿ. ಸುಧಾಕರ್, ರಾಜ್ಯದ ಎಲ್ಲ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಏಕರೂಪ ನೀತಿ ಜಾರಿಗೊಳಿಸಲಾಗುತ್ತಿದೆ. ಖಾಸಗಿ ವಿಶ್ವವಿದ್ಯಾಲಯಗಳೊಂದಿಗೆ ತೀವ್ರ ಪೈಪೋಟಿ ಇದೆ. ಈ ಹಿನ್ನೆಲೆಯಲ್ಲಿ ಏಕರೂಪ ನೀತಿ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.
ಪಾಲಿಟೆಕ್ನಿಕ್ ಪರೀಕ್ಷೆ ಸಮಯದಲ್ಲಿ ಕೇಂದ್ರೀಕೃತ ಸಿಸಿ ಕ್ಯಾಮರಾ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪ್ಲೇಸ್ ಮೆಂಟ್ ಅಧಿಕಾರಿಯನ್ನು ನೇಮಿಸಿ, ವಿವಿಧ ಕಂಪನಿಗಳೊಂದಿಗೆ ಸಂಪರ್ಕ ಹೊಂದುವಂತೆ ಮಾಡಬೇಕು ಎಂದರು.