ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಸರಬರಾಜು ಆಗುತ್ತಿರುವ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ಕಾಲಕಾಲಕ್ಕೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸುವಂತೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾದ ಎ ನಾರಾಯಣಸ್ವಾಮಿ ಸೂಚಿಸಿದರು.
ಅವರು ಇಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕತೆ ವಹಿಸಿ ಮಾತನಾಡಿದರು. ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿರುವ ಬಗ್ಗೆ ವರದಿಯಾಗುತ್ತಿದ್ದು ಈ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಲುಷಿತ ನೀರು ಪೂರೈಕೆಯಾಗುತ್ತಿರುವ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರಿನ ಸಂಸ್ಕರಣ ಘಟಕ (RO plant ) ನಿರ್ಮಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಿಬೇಕು. ಶಾಲೆಗಳಲ್ಲಿ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ವಾಟರ್ ಫಿಲ್ಟ್ ರ್ ಗಳನ್ನು ಅಳವಡಿಸಬೇಕು ಎಂದು ತಿಳಿಸಿದರು.
ಮುಂಗಾರು ಪ್ರಾರಂಭವಾಗಿದ್ದು ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜಗಳನ್ನು ವಿತರಿಸಬೇಕು. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಭಿಮಾ ಯೋಜನೆಯಡಿ ನೋಂದಾಯಿಸಿಕೊಳ್ಳುವ ಆರ್ಹ ಪಲಾನುಭವಿಗಳಿಗೆ ಸಮರ್ಪಕವಾಗಿ ಸೌಲಭ್ಯ ತಲುಪುವಂತೆ ಕ್ರಮವಹಿಸಲು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಅಪೌಷ್ಟಿಕ ಮಕ್ಕಳಿಗೆ ಸರಿಯಾದ ಪ್ರಮಾಣದಲ್ಲಿ ಪೌಷ್ಟಿಕ ಆಹಾರವನ್ನು ಪೂರೈಸಬೇಕು. ಶಾಲೆಗಳಲ್ಲಿ ಮಧ್ಯಾಹ್ನದ ಬೀಸಿ ಊಟ ಯೋಜನೆಯ ಬಗ್ಗೆ ಗಮನಹರಿಸಬೇಕು. ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಾಗಬೇಕು ಎಂದರು.
ಸರ್ಕಾರದ ಪ್ರಯೋಜಿತ ಯೋಜನೆಗಳ ಬಗ್ಗೆ ವಿಳಂಬ ಹಾಗೂ ನಿರ್ಲಕ್ಷೆ ಮಾಡದಂತೆ ಎಚ್ಚರ ವಹಿಸಬೇಕು, ವಿವಿಧ ಇಲಾಖೆಗಳಲ್ಲಿರುವಂತಹ ಸಾಲ ಸೌಲಭ್ಯಗಳು ಸರಿಯಾದ ರೀತಿಯಲ್ಲಿ ಸದ್ಬಳಕೆ ಆಗಬೇಕು ಎಂದರು.
ಜಿಲ್ಲಾಧಿಕಾರಿಯಾದ ಕೆ. ಎ ದಯಾನಂದ ರವರು ಮಾತನಾಡಿ ಕೇಂದ್ರ ಸಚಿವರು ಭಾಗವಹಿಸುವಂತಹ ಸಭೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಂಪೂರ್ಣವಾದ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು. ಅಧಿಕಾರಿಗಳು ತಮ್ಮ ಸಹೋದ್ಯೋಗಿಗಳನ್ನು ಕಳುಹಿಸದೆ ಖುದ್ದು ಸಭೆಗೆ ಹಾಜರಾಗಬೇಕು. ಮುಂದಿನ ಸಭೆಗಳಲ್ಲಿ ಈ ರೀತಿ ನಿರ್ಲಕ್ಷ ತೋರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.