ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ನಡೆಯುತ್ತಿರುವ ಹಲ್ಲೆ ಮತ್ತು ಅವರ ಕಾರ್ಯನಿರ್ವಹಣೆಗೆ ಅಡ್ಡಿ ಉಂಟು ಮಾಡುತ್ತಿರುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಬೆಂಗಳೂರಿನ ಮಡಿವಾಳದ ಬೈಕ್ ಟ್ಯಾಕ್ಸಿ ಚಾಲಕ ಎ. ಶ್ರೀಕಾಂತ ರೆಡ್ಡಿ ಮೊದಲಾದವರು ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಪೀಠ ಈ ಆದೇಶ ನೀಡಿದೆ.
ಬೈಕ್ ಟ್ಯಾಕ್ಸಿ ಚಾಲಕರ ಸೇವೆಗೆ ಅಡ್ಡಿ ಉಂಟು ಮಾಡುತ್ತಿರುವುದನ್ನು ತಡೆಯಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಕಾನೂನುಬಾಹಿರವಾಗಿ ತಡೆಯೊಡ್ಡಲು ಯಾರಾದರೂ ಯತ್ನಿಸಿದರೆ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಸರ್ಕಾರ, ಗೃಹ ಇಲಾಖೆ, ಪೊಲೀಸ್ ಇಲಾಖೆಗೆ ನ್ಯಾಯಪೀಠ ನಿರ್ದೇಶನ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.
ಅರ್ಜಿದಾರರ ಪರವಾಗಿ ಹಿರಿಯ ವಕೀಲ ಕೆ.ಎನ್. ಫಣೀಂದ್ರ ವಾದ ಮಂಡಿಸಿ ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದ್ದು, ಅದನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿದ್ದರು.