ಜನವರಿ 8 ರಂದು ಯಶ್ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಅಭಿಮಾನಿಗಳು ಪ್ಲಾನ್ ಮಾಡಿಕೊಂಡಿದ್ದಾರೆ. ಕೇಕ್ ಕತ್ತರಿಸುವುದು, ರಕ್ತದಾನ ಶಿಬಿರ, ಅನ್ನಸಂತರ್ಪಣೆ, ಅಶಕ್ತರಿಗೆ ನೆರವು ಸೇರಿ ವಿವಿಧ ಸೇವಾ ಕಾರ್ಯಗಳ ಮೂಲಕ ನೆಚ್ಚಿನ ನಟನ ಹುಟ್ಟುಹಬ್ಬ ಆಚರಿಸಲಿದ್ದಾರೆ.
ನಟ ರಾಕಿಂಗ್ ಸ್ಟಾರ್ ಯಶ್ ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ. ಸಿನಿಮಾ ಕೆಲಸದ ನಿಮಿತ್ತ ನಾನು ಊರಿನಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕೆ ನೀವು ತೋರುವ ಅಭಿಮಾನಿ ಜವಾಬ್ದಾರಿಯುತವಾಗಿರಲಿ ಎಂಬುದು ನನ್ನ ಪ್ರೀತಿಯ ಮನವಿಯಾಗಿದೆ ಎಂದು ತಿಳಿಸಿದ್ದಾರೆ.
“ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ.
ನಿಮ್ಮ ಅಭಿಮಾನದ ಅಪ್ಪುಗೆ ಮತ್ತೊಂದು ವರ್ಷವನ್ನು ಸಾರ್ಥಕಗೊಳಿಸಿದೆ.
ಹೊಸ ವರ್ಷ ಹೊಸ ಭರವಸೆಗಳೊಂದಿಗೆ ನಗುನಗುತ್ತಾ ಬದುಕೋಣ. ಬದುಕನ್ನು ಮೆರಗುಗೊಳಿಸುವಂತಹ ಹೊಸ ಯೋಜನೆಗಳೊಂದಿಗೆ ಹೊಸ ವರ್ಷವನ್ನು ಸ್ವಾಗತಿಸೋಣ.
ಸಿನಿಮಾ ಕೆಲಸದ ನಿಮಿತ್ತ ನಾನು ಹುಟ್ಟುಹಬ್ಬದಂದು ಊರಿನಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕೆ ನೀವು ತೋರುವ ಅಭಿಮಾನ ಜವಾಬ್ದಾರಿಯುತವಾಗಿರಲಿ ಎಂಬುದು ನನ್ನ ಪ್ರೀತಿಯ ಮನವಿ. ಹಾಗಾಗಿ ಪ್ಲೆಕ್ಸ್, ಬ್ಯಾನರ್ ಗಳ ಯಾವುದೇ ಆಡಂಬರ ಮಾಡದೆ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರದೆ ನೀವು ಇದ್ದಲ್ಲಿಂದಲೇ ನಿಮ್ಮ ಕುಟುಂಬದವರು ಹೆಮ್ಮೆ ಪಡುವ ಕೆಲಸ ನಿಮ್ಮಿಂದ ಆದರೆ ಅದಕ್ಕಿಂತ ದೊಡ್ಡ ಜನ್ಮದಿನದ ಉಡುಗೊರೆ ನನಗೆ ಮತ್ತೊಂದು ಇಲ್ಲ.
ಆದಷ್ಟು ಬೇಗ ನಿಮ್ಮನ್ನೆಲ್ಲಾ ಭೇಟಿ ಆಗುತ್ತೇನೆ.
ಎಲ್ಲರಿಗೂ ಹೊಸ ವರ್ಷ ಒಳಿತನ್ನು ತರಲಿ.
ನಿಮ್ಮ ಪ್ರೀತಿಯ… ಯಶ್”