alex Certify BJP ಅಧಿಕಾರಕ್ಕೆ ಬಂದರೆ ಮತ್ತೆ ಬೊಮ್ಮಾಯಿ ಸಿಎಂ ? ಕುತೂಹಲ ಕೆರಳಿಸಿದ ಜೆ.ಪಿ. ನಡ್ಡಾ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BJP ಅಧಿಕಾರಕ್ಕೆ ಬಂದರೆ ಮತ್ತೆ ಬೊಮ್ಮಾಯಿ ಸಿಎಂ ? ಕುತೂಹಲ ಕೆರಳಿಸಿದ ಜೆ.ಪಿ. ನಡ್ಡಾ ಹೇಳಿಕೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಿ ಮತ್ತೆ ಅಧಿಕಾರ ಹಿಡಿಯಬೇಕೆಂಬ ಕಾರಣಕ್ಕೆ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ದಕ್ಷಿಣ ಭಾರತದ ಎಲ್ಲ ರಾಜ್ಯಗಳಲ್ಲಿ ಅಧಿಕಾರಕ್ಕೇರಬೇಕೆಂಬ ಕನಸು ಕಾಣುತ್ತಿರುವ ಬಿಜೆಪಿಗೆ ಕರ್ನಾಟಕದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಘಟಾನುಘಟಿ ನಾಯಕರುಗಳು ರಾಜ್ಯದಾದ್ಯಂತ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ.

ಇದರ ಮಧ್ಯೆ ವಿಧಾನಸಭಾ ಚುನಾವಣೆ ಎದುರಾದ ಸಂದರ್ಭದಲ್ಲೇ ಲಿಂಗಾಯಿತ ಸಮುದಾಯದ ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಮೊದಲಾದ ಪ್ರಮುಖ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಸೇರಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಅದರಲ್ಲೂ ಲಿಂಗಾಯತನಾದ ಕಾರಣಕ್ಕೆ ಬಿಜೆಪಿಯಲ್ಲಿ ತಮ್ಮನ್ನು ಕಡೆಗಣಿಸಿ ಪಕ್ಷ ಬಿಟ್ಟು ಹೋಗುವಂತೆ ಮಾಡಲಾಯಿತು ಎಂಬ ಶೆಟ್ಟರ್ ಆರೋಪ ಎಲ್ಲಿ ಲಿಂಗಾಯತ ಸಮುದಾಯದ ಮತಗಳು ಚದುರುವಂತೆ ಮಾಡುತ್ತವೋ ಎಂಬ ಆತಂಕ ಬಿಜೆಪಿ ವರಿಷ್ಠರನ್ನು ಕಾಡುತ್ತಿದೆ.

ಹೀಗಾಗಿಯೇ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಬಿ.ಎಸ್. ಯಡಿಯೂರಪ್ಪನವರನ್ನು ಮುಂಚೂಣಿಯಲ್ಲಿಟ್ಟುಕೊಂಡೇ ಬಿಜೆಪಿ ಪ್ರಚಾರ ಕಾರ್ಯ ನಡೆಸುತ್ತಿದ್ದು, ಇದರ ಮಧ್ಯೆ ಕಲಘಟಗಿಯಲ್ಲಿ ನಡೆದ ಪ್ರಚಾರ ಕಾರ್ಯದ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ನೀಡಿರುವ ಹೇಳಿಕೆಯೊಂದು ಮಹತ್ವ ಪಡೆದುಕೊಂಡಿದೆ. ರಾಜ್ಯದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರೇ ಮುಂದುವರೆಯಲಿದ್ದಾರೆ ಎಂದು ನಡ್ಡಾ ಹೇಳಿದ್ದಾರೆ.

ಲಿಂಗಾಯತ ಮತಗಳನ್ನು ಗಮನದಲ್ಲಿಟ್ಟುಕೊಂಡೇ ಜೆ.ಪಿ. ನಡ್ಡಾ ಈ ಹೇಳಿಕೆ ನೀಡಿದ್ದಾರೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದ್ದು, ಹೀಗಾಗಿ ಬಿಜೆಪಿ ಅಧಿಕಾರಕ್ಕೆ ಬಂದರೆ ಲಿಂಗಾಯತ ಸಮುದಾಯ ಹೊರತುಪಡಿಸಿ ಬೇರೆಯವರು ಮುಖ್ಯಮಂತ್ರಿಗಳಾಗಲಿದ್ದಾರೆ ಎಂಬ ಮಾತು ಈಗ ಹಿನ್ನೆಲೆಗೆ ಸರಿದಂತಾಗಿದೆ. ಅದರಲ್ಲೂ ಯಡಿಯೂರಪ್ಪ ಅವರ ಆಶೀರ್ವಾದದಿಂದ ಮತ್ತೆ ಬೊಮ್ಮಾಯಿ ಅವರ ಸರಕಾರ ತರಬೇಕಿದೆ ಎಂದು ನಡ್ಡಾ ಹೇಳಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಮೋದಿ ಹಾಗೂ ಅಮಿತ್ ಶಾ ಅವರ ಸಮ್ಮತಿಯೂ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...