ಬೆಳಗಾವಿ: ಕಾಂಗ್ರೆಸ್ ನಾಯಕರು ಭ್ರಮನಿರಸನಗೊಂಡಿದ್ದಾರೆ. ಹಾಗಾಗಿ ಬಿಜೆಪಿ ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ಮಾಡುತ್ತಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್ ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಸೋಲು ಖಚಿತ. ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಕ್ಷೇತ್ರದ ಹುಡುಕಾಟದಲ್ಲಿಯೇ ನಿರತರಾಗಿದ್ದಾರೆ. ವರುಣಾದಲ್ಲಿ ಟಿಕೆಟ್ ಸಿಕ್ಕೆದೆ. ಅಪ್ಪನಿಗಾಗಿ ಮಗ ಯತೀಂದ್ರ ಸಿದ್ದರಾಮಯ್ಯ ದೊಡ್ಡ ತ್ಯಾಗ ಮಾಡಿದಂತೆ ಬಿಂಬಿಸುತ್ತಿದ್ದಾರೆ. ಆದರೆ ವರುಣಾದಲ್ಲಿಯೂ ಸೋಲಿನ ಭೀತಿ ಎದುರಾಗಿರುವುದರಿಂದ ಮತ್ತೊಂದು ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಸಿದ್ದರಾಮಯ್ಯನವರು ರಾಜ್ಯದ 224 ಕ್ಷೇತ್ರಗಳಿಂದಲೂ ಸ್ಪರ್ಧೆ ಮಾಡಲಿ ಎಂದು ವ್ಯಂಗ್ಯವಾಡಿದ್ದಾರೆ.
ಇದೇ ವೇಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರವಾಗಿ ಮಾತನಾಡಿದ ಜೋಶಿ, ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಏಪ್ರಿಲ್ 6 ಅಥವಾ 7ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಈ ಹಿಂದೆ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ವಿಷಯ ಚರ್ಚೆಯಾಗಿತ್ತು. ಇಂದು ಜಿಲ್ಲಾ ಕೋರ್ ಕಮಿಟಿ ಸಭೆ ನಡೆಯುತ್ತಿದೆ. ಪ್ರತಿ ಕ್ಷೇತ್ರಗಳಿಂದಲೂ ಎರಡು ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್ ಗೆ ರವಾನಿಸಲಾಗುತ್ತದೆ. ಏಪ್ರಿಲ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಘೋಷಣೆಯಾಗಬಹುದು ಎಂದರು.