ಬೆಂಗಳೂರು: ವಿಧಾನಸಭೆ ಚುನಾವಣೆಗೆ 100 ಕ್ಷೇತ್ರಗಳ ಬಿಜೆಪಿ ಪಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದರ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಬಿಜೆಪಿ ನಿಯೋಗದಿಂದ ಚುನಾವಣಾ ಆಯೋಗ, ಮಲ್ಲೇಶ್ವರಂ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತು ಜಾಲತಾಣಗಳಲ್ಲಿ ವೈರಲ್ ಆಗಿರುವ ಘಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರ ಸಹಿ ಮತ್ತು ಸೀಲು ನಕಲು ಮಾಡಲಾಗಿದೆ. ರಾಜಕೀಯ ದುರುದ್ದೇಶದಿಂದ ಇಂತಹ ಕೃತ್ಯವೆಸಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗ ಹಾಗೂ ಮಲ್ಲೇಶ್ವರಂ ಪೊಲೀಸ್ ಠಾಣೆಗೆ ಬಿಜೆಪಿ ನಿಯೋಗದಿಂದ ದೂರು ನೀಡಲಾಗಿದೆ.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಎನ್ನಲಾದ ನಕಲಿ ಪಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದನ್ನು ಪಕ್ಷದ ನಾಯಕರು ನಿರಾಕರಿಸಿದ್ದಾರೆ. ಬಿಜೆಪಿ ಮಣಿಸಲು ಸಾಧ್ಯವಾಗದೆ ಕಾಂಗ್ರೆಸ್ ಸೋಲಿನ ಹತಾಶೆಯಿಂದ ಇಂತಹ ನಕಲಿ ಪಟ್ಟಿ ಬಿಡುಗಡೆ ಮಾಡಿ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ ಆರೋಪಿಸಿದ್ದಾರೆ.