ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣದಲ್ಲಿ ಕೋಟ್ಯಾಂತರ ರೂ. ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದೆ.
ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಇಂದು ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿದೆ. ಪಾದಯಾತ್ರೆ ಬಳಿಕ ರಾಜಭವನಕ್ಕೆ ತೆರಳಿದ ವಿಪಕ್ಷ ನಾಯಕ ಆರ್.ಅಶೋಕ್ ಮತ್ತಿತರರು ನಾಯಕರನ್ನೊಳಗೊಂಡ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ದೂರು ನೀಡಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ತನಿಖೆ ಆರಂಭಿಸಿದ ಬೆನ್ನಲ್ಲೇ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು. ಆದರೀಗ ಸಿಎಂ ನಾನು ಸಚಿವರ ಬಳಿ ರಾಜೀನಾಮೆ ಕೇಳಿಲ್ಲ, ಕರೆದು ಮಾತನಾಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು.
ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ಇಬ್ಬರು ಆಪ್ತರು ಸೇರಿ ಮೂವರನ್ನು ಎಸ್ಐಟಿ ಬಂಧಿಸಿದೆ. ನೆಕ್ಕುಂಟಿ ನಾಗರಾಜ್, ನಾಗೇಶ್ವರರಾವ್, ಹೈದರಾಬಾದ್ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಅವರನ್ನು ಬಂಧಿಸಲಾಗಿದೆ.