ಬೆಂಗಳೂರು: ಬರ ಪರಿಹಾರ ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಇದರ ಬೆನ್ನಲ್ಲೇ ರಾಜ್ಯ ಬಿಜೆಪಿ, ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಬರ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು, ಸಚಿವರು, ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಬರ ಪರಿಹಾರ ವಿಚಾರ ಸುಪ್ರೀಂ ಕೋರ್ಟ್ ನಲ್ಲಿ ಬಾಕಿಯಿದೆ. ಹೀಗಿದ್ದರೂ ಕೇಂದ್ರ ಸರ್ಕಾರದ ವಿರುದ್ಧ ಅನಧಿಕೃತವಾಗಿ ಪ್ರತಿಭಟನೆ ನಡೆಸಿ ಕಾಂಗ್ರೆಸ್ ನಾಯಕರು ಮತದಾರರ ಮನಸ್ಸಿನ ಮೇಲೆ ಪರಿಣಾಮವುಂಟುಮಾಡಿ ಚುನಾವಣಾ ಅಕ್ರಮ ನಡೆಸಿ ಲಾಭ ಪಡೆಯಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಣದೀಪ್ ಸುರ್ಜೇವಾಲಾ ಸೇರಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ಇನ್ನು ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಗೆ ಕಾಂಗ್ರೆಸ್ ನಾಯಕರಿಗೆ ಅವಕಾಶ ನೀಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ವಿರುದ್ಧವೂ ಕ್ರಮ ಕೈಗೊಂಡು ಅಮಾನತು ಮಾಡುವಂತೆ ಒತ್ತಾಯಿಸಿದ್ದಾರೆ.