ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದಡಿ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿಯಿಂದ ದೂರು ನೀಡಲಾಗಿದೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ನೇತೃತ್ವದ ನಿಯೋಗ ರಾಜ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದು, ಶಿವರಾಜ್ ತಂಗಡಗಿ ಭಾಷಣ ನಿರ್ಬಂಧಿಸುವಂತೆ ಒತ್ತಾಯಿಸಿದೆ.
ಭಾನುವಾರ ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಸಚಿವ ಶಿವರಾಜ್ ತಂಗಡಗಿ ಮಾತನಾಡಿ, 10 ವರ್ಷದಲ್ಲಿ 20 ಕೋಟಿ ಉದ್ಯೋಗ ದೊರೆಯಬೇಕಿತ್ತು. ಯುವಕರು ಉದ್ಯೋಗ ನೀಡಿ ಎಂದರೆ ಪಕೋಡ ಮಾರಲು ಹೋಗಿ ಎನ್ನುತ್ತಾರೆ. ಇಂಥವರಿಗೆ ಚುನಾವಣೆಯಲ್ಲಿ ಮತ ಕೇಳಲು ನಾಚಿಕೆಯಾಗಬೇಕು. ವಿದ್ಯಾರ್ಥಿಗಳು, ಯುವಕರು ಮೋದಿ ಎಂದರೆ ಕಪಾಳಕ್ಕೆ ಹೊಡೆಯಿರಿ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
ಯುವ ಮತದಾರರ ಮೇಲೆ ಕಾಂಗ್ರೆಸ್ ಕಾರ್ಯಕರ್ತರನ್ನು ಎತ್ತಿ ಕಟ್ಟಿ ದ್ವೇಷದ ಭಾವನೆ ಮೂಡುವಂತೆ ಮಾಡಿ ಮತದಾರರಿಗೆ ಹಲ್ಲೆ ಮಾಡಲು ಪ್ರಚೋದನೆ ನೀಡಿದ್ದಾರೆ. ಇಂತಹ ಹೇಳಿಕೆಗಳಿಂದ ಯುವ ಮತದಾರರು ಆತಂಕಕ್ಕೆ ಒಳಗಾಗಿ ಮತದಾನದಿಂದ ದೂರ ಉಳಿಯುವ ಸಂಭವ ಇರುತ್ತದೆ. ಇಂತಹ ಹೇಳಿಕೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.