ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಕಾರಣವಾಗಿದ್ದ 40% ಕಮಿಷನ್ ಆರೋಪದ ಕುರಿತಾಗಿ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಪಿಎಸ್ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣ ಮೊದಲಾದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿ ಬಂದ ಆರೋಪಗಳ ಬಗ್ಗೆ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಪಿಎಸ್ಐ ನೇಮಕಾತಿ ಹಗರಣದ ತನಿಖೆಗಾಗಿ ನ್ಯಾಯಮೂರ್ತಿ ವೀರಪ್ಪ ನೇತೃತ್ವದಲ್ಲಿ ಆಯೋಗ ರಚನೆ ಮಾಡಲಾಗಿದೆ. ಬಿಟ್ ಕಾಯಿನ್ ಹಗರಣ ಸಂಬಂಧ ತನಿಖೆಗೆ ವಿಶೇಷ ತನಿಕಾ ದಳ ರಚಿಸಲಾಗಿದೆ.
ಈಗ 40% ಕಮಿಷನ್ ಆರೋಪ ಸಂಬಂಧ ನ್ಯಾಯಾಂಗ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ನೇತೃತ್ವದ ಏಕ ಸದಸ್ಯ ಆಯೋಗ ರಚಿಸಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಉನ್ನತ ಮಟ್ಟದ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ.
ಈ ಮೂಲಕ ಬಿಜೆಪಿ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 40 ಪರ್ಸೆಂಟ್ ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.