ಬೆಂಗಳೂರು: ಕಾಂಗ್ರೆಸ್ ನ 40% ಕಮಿಷನ್ ಆರೋಪಕ್ಕೆ ಪ್ರತ್ಯಸ್ತ್ರ ಹೂಡಲು ಬಿಜೆಪಿ ಮುಂದಾಗಿದ್ದು, ಕಾಂಗ್ರೆಸ್ ಅವಧೀಯ ಹಗರಣಗಳ ತನಿಖೆಗೆ ನಿರ್ಧರಿಸಿದೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳನ್ನು ಪ್ರಸ್ತಾಪಿಸುವುದು, ಅಗತ್ಯವಿದ್ದಲ್ಲಿ ಅವುಗಳನ್ನು ತನಿಖೆಗೆ ವಹಿಸುವುದರ ಬಗ್ಗೆ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖ ನಾಯಕರ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್, ಸಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ್, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಮೊದಲಾದವರು ಭಾಗವಹಿಸಿದ್ದ ಸಭೆಯಲ್ಲಿ ಈ ಕುರಿತಾಗಿ ಚರ್ಚೆ ನಡೆಸಲಾಗಿದೆ.
ಕಾಂಗ್ರೆಸ್ ಅವಧಿಯಲ್ಲಿ ನಡೆದ ಹಗರಣಗಳನ್ನು ಕೆದಕಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ಕಾಂಗ್ರೆಸ್ 40% ಕಮಿಷನ್ ಆರೋಪ ಪ್ರಸ್ತಾಪಿಸಲು ತಯಾರಿ ಮಾಡಿಕೊಂಡಿದ್ದರೆ, ಇದಕ್ಕೆ ತಿರುಗೇಟು ನೀಡಲು ಮುಂದಾಗಿರುವ ಬಿಜೆಪಿ ಕಾಂಗ್ರೆಸ್ ಅವಧಿಯಲ್ಲಿನ ಹಗರಣಗಳನ್ನು ಪ್ರಸ್ತಾಪಿಸುವ ಜೊತೆಗೆ ಸಾಧ್ಯವಾದರೆ ತನಿಖೆಗೆ ವಹಿಸುವ ಮೂಲಕ ತಿರುಗೇಟು ನೀಡಲು ಸಜ್ಜಾಗಿದೆ.