ಬೆಂಗಳೂರು: ಇತ್ತೀಚೆಗಷ್ಟೆ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು, ಯಾರ ನಾಯಕತ್ವದಲ್ಲಿ 2023 ರ ಚುನಾವಣೆ ಎದುರಿಸಬೇಕು ಎಂಬುದರ ಕುರಿತಾಗಿ ಪಕ್ಷದ ಸಂಸದೀಯ ಮಂಡಳಿ ಸಭೆ ನಿರ್ಧರಿಸಲಿದೆ ಎಂದು ಹೇಳಿದ್ದಾರೆ. ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಮಾತ್ರವಲ್ಲ, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
2023 ರ ಚುನಾವಣೆ ಸಿದ್ಧತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲು ಜನವರಿ 7 ರಿಂದ 9ರ ವರೆಗೆ ಬಿಜೆಪಿ ಚಿಂತನಾ ಬೈಠಕ್ ನಡೆಯಲಿದೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿರುವ ಬಗ್ಗೆ ಪರಾಮರ್ಶೆ ನಡೆಸಲಾಗುತ್ತದೆ.
ಪತ್ರಿಕಾಗೋಷ್ಠಿಯಲ್ಲಿ ನಾಯಕತ್ವದ ಬಗ್ಗೆ ಮಾತನಾಡಿದ ಸಿ.ಟಿ. ರವಿ, ಬಿಜೆಪಿ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಹೊಂದಿದೆ. ಅನೇಕ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷರು ಮುನ್ನಡೆಸಿಕೊಂಡು ಹೋಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರು ಹೇಳಿಕೊಂಡು ನಾವು ಚುನಾವಣೆ ಎದುರಿಸುತ್ತೇವೆ. ಯಾರ ನಾಯಕತ್ವದಲ್ಲಿ ಚುನಾವಣೆಗೆ ಹೋಗಬೇಕು ಎನ್ನುವ ಅಗತ್ಯ ಕಂಡುಬಂದರೆ ಸಂಸದೀಯ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗುತ್ತದೆ ಎಂದಿದ್ದಾರೆ.