ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಿರುವ ಬಿಜೆಪಿಗೆ ಟಿಕೆಟ್ ಹಂಚಿಕೆ ವಿಚಾರ ಸಂಕಷ್ಟ ತಂದಿಟ್ಟಿದೆ.
ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅವರು ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇವರೊಂದಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕೂಡ ಬಿಜೆಪಿಯಿಂದ ದೂರ ಸರಿಯಲಿದ್ದಾರೆ.
ಯಡಿಯೂರಪ್ಪ, ಈಶ್ವರಪ್ಪ ನಂತರ ಹಿರಿಯ ನಾಯಕರಾಗಿರುವ ಜಗದೀಶ್ ಶೆಟ್ಟರ್ ಬಿಜೆಪಿ ತೊರೆಯುತ್ತಿರುವುದು ಪಕ್ಷಕ್ಕೆ ದೊಡ್ಡ ನಷ್ಟವೆಂದೇ ಹೇಳಲಾಗಿದೆ. ಯಡಿಯೂರಪ್ಪ ಮತ್ತು ಈಶ್ವರಪ್ಪ ಚುನಾವಣೆ ರಾಜಕಾರಣದಿಂದ ಹಿಂದೆ ಸರಿದಿದ್ದು, ಜಗದೀಶ್ ಶೆಟ್ಟರ್ ಬದಲಿಗೆ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲು ಬಿಜೆಪಿ ವರಿಷ್ಠರು ಮುಂದಾಗಿದ್ದರು. ಇದಕ್ಕೆ ಒಪ್ಪದ ಜಗದೀಶ್ ಶೆಟ್ಟರ್ ತಾವೇ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಶಾಸಕ ಸ್ಥಾನಕ್ಕೆ ಮತ್ತು ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಹಾವೇರಿ ಶಾಸಕ ನೆಹರು ಓಲೆಕಾರ್ ಕೂಡ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಶಾಸಕ ಸ್ಥಾನಕ್ಕೆ ಮತ್ತು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್, ನೆಹರು ಓಲೆಕಾರ್ ಮೊದಲಾದವರು ಬಿಜೆಪಿಯಿಂದ ದೂರವಾಗುತ್ತಿರುವುದು ಉತ್ತರ ಕರ್ನಾಟಕದಲ್ಲಿ ಬಿಜೆಪಿ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.