ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಇದ್ದಾಗಲೇ 15 ಶಾಸಕರನ್ನು ಕರೆದು ತಂದಿದ್ದೆವು. ಆಗ ಏನೂ ಮಾಡಲು ಆಗಲಿಲ್ಲ. ಬೇರೆ ಪಕ್ಷ ಅಧಿಕಾರಕ್ಕೆ ಬರಲು ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಡುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಹೀಗೆ ಹೇಳುವ ಮೂಲಕ ಚುನಾವಣೆಗೂ ಮೊದಲೇ ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ. ಕಗ್ಗಲಿಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಇದ್ದು, ಪೊಲೀಸರಿದ್ದರೂ ಅವರಿಗೆ ಸರ್ಕಾರ ಉಳಿಸಿಕೊಳ್ಳಲು ಆಗಲಿಲ್ಲ. ಈಗ ನಮ್ಮದೇ ಸರ್ಕಾರವಿದ್ದು, ಅವರಿಂದ ಏನು ಮಾಡಲು ಸಾಧ್ಯವಿದೆ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಬಿಟ್ಟು ಬೇರೆ ಪಕ್ಷದ ಸರ್ಕಾರ ಮಾಡಲು ಮೋದಿ, ಅಮಿತ್ ಶಾ ಬಿಡುವುದಿಲ್ಲ. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರವೇ ಬರುತ್ತದೆ. ಯಾರೂ ಹೆದರುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬರಲು ಕನಕಪುರದಲ್ಲಿ ಗೆಲುವು ಸಾಧಿಸಬೇಕಿದೆ. ಕಾರ್ಯಕರ್ತರು ಹಳ್ಳಿ ಹಳ್ಳಿಗಳಲ್ಲಿಯೂ ಶ್ರಮವಹಿಸಿ ಕೆಲಸ ಮಾಡಬೇಕು. ಸರ್ಕಾರದ ಯೋಜನೆ, ಸಾಧನೆಗಳ ಬಗ್ಗೆ ಜನರಿಗೆ ತಿಳಿಸಬೇಕು. ಅಭಿವೃದ್ಧಿಯ ಮೋದಿ ಆಡಳಿತ ಬೇಕೋ ಡಿ.ಕೆ. ಶಿವಕುಮಾರ್ ಆಡಳಿತ ಬೇಕೋ ಎಂಬುದನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದ್ದಾರೆ.