ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗುವ ಸಾಧ್ಯತೆ ದಟ್ಟವಾಗಿದ್ದು, ಸ್ಥಾನಗಳ ಬಗ್ಗೆ ಪ್ರಧಾನಿ ಮೋದಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
2024 ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಕೈಜೋಡಿಸಲು ಭಾರತೀಯ ಜನತಾ ಪಕ್ಷ ಮತ್ತು ಜನತಾ ದಳ(ಜಾತ್ಯತೀತ) ‘ತಾತ್ವಿಕವಾಗಿ’ ಒಪ್ಪಿಕೊಂಡಿವೆ ಎಂದು ಮೂಲಗಳು ತಿಳಿಸಿವೆ. ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರು ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮೈತ್ರಿ ರಚನೆ ಕುರಿತು ಚರ್ಚಿಸಿದ್ದಾರೆ. ಪ್ರಧಾನಿ ಮೋದಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ಜೂನ್ 1996 ಮತ್ತು ಏಪ್ರಿಲ್ 1997 ರ ನಡುವೆ ಪ್ರಧಾನಿಯಾಗಿದ್ದ ಹೆಚ್.ಡಿ. ದೇವೇಗೌಡರು ಕರ್ನಾಟಕದಲ್ಲಿ ಐದು ಲೋಕಸಭಾ ಸ್ಥಾನಗಳನ್ನು ಕೋರಿದ್ದಾರೆ. ಅಂತಿಮ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೆಚ್ಚಿನ ಮಾತುಕತೆಗಳು ಪ್ರಗತಿಯಲ್ಲಿದ್ದರೂ, ದೇವೇಗೌಡರು ಮತ್ತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ನಾಯಕರೊಂದಿಗೆ ಚರ್ಚಿಸಿದ ನಂತರವೇ ಬಿಜೆಪಿಗೆ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ ಎಂದು ಹೇಳಲಾಗಿದೆ.
ಮಂಡ್ಯ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ ಕೇಳಿದೆ. ಆದರೆ, ಮಂಡ್ಯ ಹೊರತುಪಡಿಸಿ ಕ್ಷೇತ್ರಗಳ ಹಂಚಿಕೆಗೆ ಬಿಜೆಪಿ ಒಪ್ಪಿದೆ ಎನ್ನಲಾಗಿದೆ.
ಜುಲೈನಲ್ಲಿ ದೇವೇಗೌಡರು, ಬಿಜೆಪಿ ನೇತೃತ್ವದ ಎನ್ಡಿಎ ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ನಿರಾಕರಿಸಿ, ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಹೋರಾಡಲಿದೆ ಎಂದು ಹೇಳಿದ ತಿಂಗಳುಗಳ ನಂತರ ಚರ್ಚೆಗಳು ಬಂದಿವೆ.
ನಾವು (ಪಕ್ಷ) ಐದು, ಆರು, ಮೂರು, ಎರಡು ಅಥವಾ ಒಂದು ಸ್ಥಾನ ಗೆದ್ದರೂ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ ಎಂದು ದೇವೇಗೌಡರು ಹೇಳಿದ್ದಾರೆ.
ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿವೆ. 2019 ರ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದರೆ, ಪಕ್ಷದ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಮಂಡ್ಯ ಕ್ಷೇತ್ರದಿಂದ ವಿಜಯಶಾಲಿಯಾದರು. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಪಡೆದುಕೊಂಡಿವೆ. ಜೆಡಿಎಸ್ ಭದ್ರಕೋಟೆಯಾದ ಹಾಸನದಲ್ಲಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದ್ದರು.