ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಹುತೇಕ ನಿಶ್ಚಿತವಾಗಿದೆ. ಜೆಡಿಎಸ್ ನಾಯಕರು ಅಧಿಕೃತವಾಗಿಯೇ ಮೈತ್ರಿ ಬಗ್ಗೆ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡರು ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿಯೊಂದಿಗೆ ಮೈತ್ರಿ ವಿಷಯವನ್ನು ಅಧಿಕೃತವಾಗಿ ತಿಳಿಸಿದ್ದು, ಮೈತ್ರಿಯನ್ನು ಸಮರ್ಥಿಸಿಕೊಂಡಿದ್ದಾರೆ.
ರಾಜ್ಯದ ಜನರ ಹಿತಕ್ಕಾಗಿ ಎರಡು ಪಕ್ಷಗಳು ಮೈತ್ರಿ ಮಾಡಿಕೊಳ್ಳಲಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೂರೇ ತಿಂಗಳ ದುರಾಡಳಿತ ಪರಕಾಷ್ಟೆ ಮುಟ್ಟಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಹೊಸ ರಾಜಕೀಯ ಅಧ್ಯಾಯ ಆರಂಭವಾಗುತ್ತಿದ್ದು, ಪ್ರತಿಪಕ್ಷಗಳಾಗಿ ನಾವು ಒಟ್ಟಿಗೆ ಸರ್ಕಾರದ ವಿರುದ್ಧ ಹೋರಾಡುತ್ತೇವೆ. ಜನರ ಹಿತಕ್ಕಾಗಿ ಮೈತ್ರಿ ಮಾಡಿಕೊಳ್ಳುತ್ತೇವೆ ಎಂದು ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.