ರಾಮನಗರ: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರಿಗೆ ಕೈಗೊಂಡಿರುವ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಕಾರ್ಯಕರ್ತೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಪಾದಯಾತ್ರೆ ರಾಮನಗರ ಪ್ರವೇಶಿಸಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪಾದಯಾತ್ರೆಯಲ್ಲಿ ನಡೆಯುತ್ತಿದ್ದ ಮಹಿಳೆ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.
ಮೃತ ಮಹಿಳೆ ಬೆಂಗಳೂರಿನ ಬಸವನಗುಡಿ ಮೂಲದವರಾಗಿದ್ದು, ಗೌರಮ್ಮ ಎಂದು ಗುರುತಿಸಲಾಗಿದೆ. ಚನ್ನಪಟ್ಟಣದಲ್ಲಿ ಪಾದಯಾತ್ರೆ ನಡೆಸುತ್ತಿದ್ದಾಗ ಗೌರಮ್ಮ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದರು ಎಂದು ತಿಳಿದುಬಂದಿದೆ.
ಇನ್ನು ಪಾದಯಾತ್ರೆ ವೇಳೆ ಬಿಜೆಪಿ ಮುಖಂಡ ಶಂಕರ್ ಎಂಬುವವರು ಅಸ್ವಸ್ಥಗೊಂಡಿದ್ದಾರೆ. ಬೆಂಗಳೂರಿನ ಜಯನಗರ ಮಂಡಳ ಉಪಾಧ್ಯಕ್ಷ ಶಂಕರ್ ಅಸ್ವಸ್ಥಗೊಂಡಿದ್ದು, ತಕ್ಷಣ ಆಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.