ಬೆಂಗಳೂರು: ಮುಡಾ ಹಗರಣ ನಡೆಸಿದ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ನಿಂದ ನಾಳೆ ಪ್ರತಿಭಟನೆ ನಡೆಸಲಾಗುವುದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ನಾಳೆ ಸೋಮವಾರ ಬೆಳಗ್ಗೆ 11.30 ಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪ್ರತಿಭಟಿಸಲಿದ್ದಾರೆ.
ಕಾಂಗ್ರೆಸ್ ನ ನಡಿಗೆ, ಭ್ರಷ್ಟಾಚಾರದ ಕಡೆಗೆ ಎಂಬಂತಾಗಿದೆ. ಈ ಸರ್ಕಾರ ಬಂದಾಗ ಜನರು ಗ್ಯಾರಂಟಿಗಳ ಬಗ್ಗೆ ಭರವಸೆ ಇಟ್ಟುಕೊಂಡಿದ್ದರು. ಆದರೆ ಜನರ ಅಪೇಕ್ಷೆಗೆ ವಿರುದ್ಧವಾಗಿ ಸರ್ಕಾರ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ 65 ಕೇಸುಗಳಿದ್ದು, ಅದನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ. ಅಂದಮೇಲೆ ಅವರು ಹೇಗೆ ಕ್ಲೀನ್ ಎನ್ನುವುದು ತಿಳಿದಿಲ್ಲ. ಈಗ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ಕಾಂಗ್ರೆಸ್ ಸ್ವಾಗತ ಮಾಡಬೇಕಿತ್ತು. ತನಿಖೆಯಾಗಿ ಸ್ವಚ್ಛವಾಗಿ ಹೊರಬಂದರೆ ಕ್ಲೀನ್ ಎಂದು ನಂಬಬಹುದು. ಅದನ್ನು ಬಿಟ್ಟು ರಾಜ್ಯಾದ್ಯಂತ ಹೋರಾಟ ಮಾಡಲು ಮುಂದಾಗಿದ್ದಾರೆ. ಭ್ರಷ್ಟಾಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಈ ನಿಟ್ಟಿನಲ್ಲಿ ನಮ್ಮ ಹೋರಾಟ ನಡೆಯಿದೆ ಎಂದರು.
ಇದೇ ವೇಳೆ ಜೆ.ಪಿ. ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ನಾಳೆ ಬಿಜೆಪಿ ನಡೆಸುವ ಪ್ರತಿಭಟನೆಯಲ್ಲಿ ಜೆಡಿಎಸ್ ನಾಯಕರು ಭಾಗಿಯಾಗಲಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ-ಜೆಡಿಎಸ್ ನಾಯಕರಿಂದ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದ್ದಾರೆ.