ಬೆಂಗಳೂರು: ರಾಜ್ಯ ಕಾಂಗ್ರೆಸ್ ಅಧಿಕೃತ ಟ್ವಿಟರ್ ಪೇಜ್ ನಲ್ಲಿ ಕೇಂದ್ರ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ನಾಯಕರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಮೈಸೂರು ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಕಾಂಗ್ರೆಸ್ ಅವಹೇಳನಕಾರಿ ಪೋಸ್ಟ್ ಮಾಡಿದೆ ಎಂದು ಬಸವನಗುಡಿ ಕ್ಷೇತ್ರದ ಶಾಸಕ ರವಿ ಸುಬ್ರಮಣ್ಯ ನೇತೃತ್ವದ ಬಿಜೆಪಿ ನಿಯೋಗ ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರಿಗೆ ದೂರು ನೀಡಲಾಗಿದೆ.
ಈ ಕುರಿತು ಮಾತನಾಡಿದ ಶಾಸಕ ರವಿ ಸುಬ್ರಹ್ಮಣ್ಯ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ನಾಯಕರ ಅವಹೇಳನ ಮಾಡಲಾಗುತ್ತಿದೆ. ಸುಳ್ಳು ಆರೋಪ ತೋರಿಸುತ್ತಿದೆ. ಬಿ.ಎಲ್. ಸಂತೋಷ್, ಪ್ರತಾಪ್ ಸಿಂಹ ಅವರ ಫೋಟೋ ಸೇರಿಸಿ ಮೌತ್ ಪೀಸ್ ಎಂದು ಹೇಳಲಾಗಿದೆ. ಗ್ಯಾರಂಟಿ ಯೋಜನೆ ಅನುಷ್ಠಾನ ಸಾಧ್ಯವಾಗದ ಕಾರಣಕ್ಕೆ ಸುಖಾಸುಮ್ಮನೆ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಲಾಗುತ್ತಿದೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.