ಬೆಂಗಳೂರು: ಬರದಿಂದ ಸಂಕಷ್ಟ ಎದುರಿಸುತ್ತಿರುವ ರಾಜ್ಯಕ್ಕೆ ನ್ಯಾಯಯುತ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟದ ತೀರ್ಮಾನ ಪ್ರಕಟಿಸಿದ್ದಾರೆ. ಈ ಮೂಲಕ ರಾಜ್ಯದ ಬರ ಪರಿಹಾರ ಕೋರಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂಬ ವಿಚಾರವನ್ನೇ ಪ್ರಮುಖ ಚುನಾವಣಾ ಅಸ್ತ್ರವಾಗಿ ಬಳಸಿಕೊಳ್ಳಲು ಆಡಳಿತರೂಢ ಕಾಂಗ್ರೆಸ್ ತೀರ್ಮಾನಿಸಿದೆ.
ಗ್ಯಾರಂಟಿ ಯೋಜನೆಗಳ ಯಶಸ್ಸಿನ ಜೊತೆಗೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆದ ಅನ್ಯಾಯವನ್ನು ಲೋಕಸಭೆ ಚುನಾವಣೆ ಪ್ರಚಾರ ಅಖಾಡದಲ್ಲಿ ಪ್ರಮುಖವಾಗಿ ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧರಿಸಿದೆ. ಬರ ಪರಿಹಾರ ವಿಚಾರ ಕಾಂಗ್ರೆಸ್ ಗೆ ಸಿಕ್ಕ ಪ್ರಮುಖ ಅಸ್ತ್ರವಾಗಿದ್ದು, ಕೇಂದ್ರ ಸರ್ಕಾರ ರಾಜ್ಯದ ನೆರವಿಗೆ ಬಂದಿಲ್ಲ ಎಂಬುದನ್ನು ಪ್ರಚಾರ ಅಖಾಡದಲ್ಲಿ ಪ್ರಮುಖವಾಗಿ ಪ್ರಸ್ತಾಪಿಸಲು ಮುಂದಾಗಿದೆ. ಇದೇ ವೇಳೆ ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗುವ ಮೂಲಕ ಜನರಿಗೆ ಸಂದೇಶ ನೀಡುವ ಲೆಕ್ಕಾಚಾರ ಇದೆ ಎಂದು ಹೇಳಲಾಗಿದೆ.