ಬೆಳಗಾವಿ: ಹಿಂದೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ನಡೆದ ಶಾಸಕಾಂಗ ಸಭೆ ಆಗಮಿಸಿದ್ದ ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ಸಭೆ ಆರಂಭಕ್ಕೆ ಮೊದಲೇ ಬಹಿಷ್ಕರಿಸಿ ಹೊರ ನಡೆದಿದ್ದರು.
ಹೀಗಾಗಿ ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿ 5 ದಿನ ಕಳೆದರೂ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸುವ ಗೋಜಿಗೆ ಹೋಗಿಲ್ಲ. ವಿಧಾನಸಭೆಯಲ್ಲಿ ಶಾಸಕರು ಮತ್ತು ನಾಯಕರ ನಡುವೆ ಹೊಂದಾಣಿಕೆ ಕೊರತೆ ಕಂಡು ಬಂದಿದೆ.
ಅಧಿವೇಶನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಲು ಬಿಜೆಪಿ ಸಜ್ಜಾಗಿದ್ದು, ಶಾಸಕರಲ್ಲಿ ಒಮ್ಮತ ಮೂಡಿಸಿ ಶಾಸಕಾಂಗ ಸಭೆ ನಡೆಸಲು ತೀರ್ಮಾನಿಸಿದೆ. ಪಕ್ಷದ ಹಿರಿಯ ನಾಯಕರು ಈ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದು, ಸಮನ್ವಯದಿಂದ ಕಾರ್ಯನಿರ್ವಹಿಸುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.
ಶಾಸಕಾಂಗ ಪಕ್ಷದ ಸಭೆ ಕರೆದು ಚರ್ಚೆ ನಡೆಸಿ ಹೋರಾಟದ ರೂಪುರೇಷೆ ಬಗ್ಗೆ ಚರ್ಚಿಸಲಾಗುವುದು. ಸೋಮವಾರದಿಂದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳು ಸೇರಿದಂತೆ ರಾಜ್ಯದ ವಿವಿಧ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಲಾಗಿದೆ.