ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.
ಇನ್ನೊಂದು ವಾರದಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. 8 ಕೋಟಿ ರೂ. ಪತ್ತೆಯಾದ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರ ಹೇಳಿಕೆ ದಾಖಲು ಮಾಡಿಕೊಂಡಿದ್ದಾರೆ.
ಕೆ.ಎಸ್.ಡಿ.ೆಲ್. ಅಧಿಕಾರಿಗಳು ಮತ್ತು ಸಿಬ್ಬಂದಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. 25ಕ್ಕೂ ಹೆಚ್ಚು ಜನರ ಸಾಕ್ಷಿಗಳ ಹೇಳಿಕೆಯನ್ನು ತನಿಖಾ ತಂಡ ಪಡೆದುಕೊಂಡಿದೆ. ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆಯವರ ಹೇಳಿಕೆಯನ್ನು ಕೂಡ ದಾಖಲಿಸಲಾಗಿದೆ. ಇನ್ನೊಂದು ವಾರದಲ್ಲಿ ಚಾರ್ಜ್ ಶೀಟ್ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.