ಕಾರವಾರ: ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಮರಳಿ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಿಜೆಪಿ ಶಾಸಕರಾಗಿರುವ ಶಿವರಾಮ್ ಹೆಬ್ಬಾರ್ ವಾಪಸ್ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿಗೆ ಮತ್ತಷ್ಟು ಪುಷ್ಠಿ ನೀಡಿದಂತಿದೆ.
ಈ ಬೆಳವಣಿಗೆ ಬೆನ್ನಲ್ಲೇ ಶಾಸಕರ ಕ್ಷೇತ್ರ ಯಲ್ಲಾಪುರ ಹಾಗೂ ಶಿರಸಿ ಕಾಂಗ್ರೆಸ್ ಕಾರ್ಯಕರ್ತರು ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಶಿವರಾಮ್ ಹೆಬ್ಬಾರ್ ಅವರನ್ನು ಮರಳಿ ಕಾಂಗ್ರೆಸ್ ಗೆ ಸೇರಿಸಿಕೊಳ್ಳಬಾರದು ಎಂಬ ಆಗ್ರಹ ವ್ಯಕ್ತವಾಗಿದೆ.
ಇರುವ ಸರ್ಕಾರವನ್ನೇ ಬೀಳಿಸಿ ಬಿಜೆಪಿಗೆ ಹೋದವರು. ಈಗ ಶಾಸಕಾಗಿದ್ದಾರೆ. ಮತ್ತೆ ಅವರು ವಾಪಸ್ ಬಂದ್ರೆ ಅವರನ್ನು ಶಾಸಕರನ್ನಾಗಿ ಮಾಡುವುದಿಲ್ಲ. ಅವರು ಪಕ್ಷಕ್ಕೆ ಬೇಡವೇ ಬೇಡ ಎಂದು ಕಾರ್ಯಕರ್ತರೊಬ್ಬರು ಸಭೆಯಲ್ಲಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.