ಬೆಂಗಳೂರು: ಜೂನ್ 13 ರಂದು ವಿಧಾನಪರಿಷತ್ 7 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಣೆ ಬಗ್ಗೆ ತೀರ್ಮಾನ ಕೈಗೊಂಡಿಲ್ಲ. ಬೆಳಗ್ಗೆ 10 ಗಂಟೆಯ ನಂತರ ಅಭ್ಯರ್ಥಿ ಹೆಸರು ಘೋಷಣೆ ಮಾಡುವ ಸಾಧ್ಯತೆ ಇದೆ. ವಿಧಾನ ಪರಿಷತ್ ಮಾಜಿ ಸದಸ್ಯ ಶರವಣ ಅವರಿಗೆ ಜೆಡಿಎಸ್ ಟಿಕೆಟ್ ಬಹುತೇಕ ಖಚಿತ ಎಂದು ಹೇಳಲಾಗಿದೆ.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ. ಕೆಲವು ಸಂಭಾವ್ಯ ಅಭ್ಯರ್ಥಿಗಳಿಗೆ ಪಕ್ಷದ ವರಿಷ್ಠರು ಆಂತರಿಕವಾಗಿ ಸೂಚನೆ ನೀಡಿದ್ದು, ನಾಮಪತ್ರ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ. ಆಂತರಿಕ ಸೂಚನೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಜಾತಿವಾರು ಆಧಾರದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಮುಂದಾಗಿದೆ.
ಬ್ರಾಹ್ಮಣರು, ಲಿಂಗಾಯತ ಪಂಚಮಸಾಲಿ, ಇತರ ಹಿಂದುಳಿದ ವರ್ಗ, ಮಹಿಳಾ ಕೋಟಾದಡಿ ಬಿಜೆಪಿಯಿಂದ ಅವಕಾಶ ನೀಡುವ ಸಾಧ್ಯತೆ ಇದೆ. ಉತ್ತರ ಕರ್ನಾಟಕ ಭಾಗಕ್ಕೆ ಒಂದು ಪರಿಷತ್ ಸ್ಥಾನ ಸಿಗಲಿದೆ. ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ, ಬಿಜೆಪಿ ರಾಜ್ಯ ಘಟಕದ ಖಜಾಂಚಿ ಸುಬ್ಬ ನರಸಿಂಹ, ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ ಕೇಶವ ಪ್ರಸಾದ್, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಕೊನೆಕ್ಷಣದಲ್ಲಿ ವರಿಷ್ಠರು ಅಚ್ಚರಿ ಅಭ್ಯರ್ಥಿಗಳನ್ನು ಪ್ರಕಟಿಸಬಹುದು ಎಂದು ಹೇಳಲಾಗಿದೆ.