ಲೋಕಸಭೆ ಚುನಾವಣೆ ಬೆನ್ನಲ್ಲೇ ವಿಧಾನಪರಿಷತ್ ನ 6 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದೆ.
ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ಎದುರಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಬಂಡಾಯ ಎದುರಿಸಿದ್ದ ಬಿಜೆಪಿಗೆ ಈಗ ವಿಧಾನಪರಿಷತ್ ಚುನಾವಣೆಯಲ್ಲೂ ಬಂಡಾಯ ಎದುರಿಸಬೇಕಾದ ಒತ್ತಡ ಎದುರಾಗಿದೆ.
ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಡಾ. ಧನಂಜಯ ಸರ್ಜಿ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ನಿರಾಸೆಯಾಗಿದ್ದು, ಬಿಜೆಪಿ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಕ್ಷಕ್ಕಾಗಿ ದುಡಿದ ನನ್ನಂತಹ ನಿಷ್ಠಾವಂತರಿಗೆ ಟಿಕೆಟ್ ಸಿಗುತ್ತಿಲ್ಲ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ, ವಿಧಾನಪರಿಷತ್ ಟಿಕೆಟ್ ನೀಡುತ್ತೇವೆ ಎಂದು ಹಿರಿಯರು ಹೇಳಿದ್ದರು. ಆದರೆ ಟಿಕೆಟ್ ನೀಡಿಲ್ಲ ಭೌಗೋಳಿಕವಾಗಿ ಕರಾವಳಿಯವರಿಗೆ ಅನ್ಯಾಯವಾಗಿದೆ. ಶಿಕ್ಷಕರ ಅಥವಾ ಪದವೀಧರ ಕ್ಷೇತ್ರದಲ್ಲಿ ಒಂದು ಟಿಕೆಟ್ ಅನ್ನು ಕರಾವಳಿಗೆ ಮೀಸಲಿಡಬೇಕಿತ್ತು ಎಂದು ರಘುಪತಿ ಭಟ್ ಹೇಳಿದ್ದಾರೆ.
ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ಹಾದಿ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ರಘುಪತಿ ಭಟ್ ಹೇಳಿದ್ದು, ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ನಾನು ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧಿಸುತ್ತೇನೆ. ಬಂಡಾಯ ಸ್ಪರ್ಧೆ ಇಲ್ಲ. ನಾನು ಸೋತರೂ, ಗೆದ್ದರೂ ಬಿಜೆಪಿಯಲ್ಲೇ ಇರುತ್ತೇನೆ ಎಂದು ರಘುಪತಿ ಭಟ್ ಹೇಳಿದ್ದಾರೆ. ಇನ್ನು ಕಾಂಗ್ರೆಸ್ಸಿನಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್.ಪಿ. ದಿನೇಶ್ ಕೂಡ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.