ಬೆಂಗಳೂರು: ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ವಿಪಕ್ಷ ಬಿಜೆಪಿ ನಾಯಕರು, ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರು, ಕಲಬುರ್ಗಿ, ಮಂಗಳೂರು, ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ನಾಯಕರು ಕೈಯಲ್ಲಿ ಚಿಪ್ಪು, ಚೊಂಬು ಹಿಡಿದು ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರ ಜನರಿಗೆ ಬೆಲೆ ಏರಿಕೆ ಮೂಲಕ ಚಿಪ್ಪು ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬೆಂಗಳೂರಿನ ಆನಂದ್ ರಾವ್ ಸರ್ಕಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆದಿದ್ದು, ಅಣಕು ಶವಯಾತ್ರೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಆರ್.ಅಶೋಕ್, ಬಿಜೆಪಿ ಅವಧಿಯಲ್ಲಿ ಕೇವಲ 1 ರೂಪಾಯಿ ಬೆಲೆ ಏರಿಕೆ ಮಾಡಿದ್ದಕ್ಕೆ ಅಂದು ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಬೈಕ್ ಹೊತ್ತು ಶವಯಾತ್ರೆ ಮಾಡಿ ಪ್ರತಿಭಟಿಸಿದ್ದರು. ಬಳಿಕ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಯಾವುದೇ ಬೆಲೆ ಏರಿಕೆ ಮಾಡಲ್ಲ ಎಂದು ಭರವಸೆ ಕೊಟ್ಟಿದ್ದರು. ಆದರೆ ಕಳೆದ ಒಂದು ವರ್ಷದಿಂದ ಅಗತ್ಯವಸ್ತುಗಳ ಬೆಲೆ ನಿರಂತರವಾಗಿ ರಾಜ್ಯ ಸರ್ಕಾರವೇ ಏರಿಸುತ್ತಿದೆ. ಈಗ ಪೆಟ್ರೋಲ್ ದರ 3 ರೂಪಾಯಿ ಡೀಸೆಲ್ ದರ ಮೂರುವರೆ ಏರಿಸಿದ್ದಾರೆ. ಸಿದ್ದರಾಮಯ್ಯನವರಿಗೆ ಮಾನ ಮರ್ಯಾದೆ ಎಂಬುದು ಇದ್ದರೆ ತಕ್ಷಣ ಬೆಲೆ ಏರಿಕೆ ಹಿಂಪಡೆಯಬೇಕು ಇಲ್ಲವಾದಲ್ಲಿ ರಾಜೀನಾಮೆ ಕೊಟ್ಟು ಕೆಳಗಿಳಿಯಬೇಕು ಎಂದು ಆಗ್ರಹಿಸಿದರು.
ಸಿಎಂ ಸಿದ್ದರಾಮಯ್ಯ, ಭ್ರಷ್ಟ ಸಿಎಂ, ಲೂಟಿ ಮಾಡಲು ಹೊರಟಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ನವರು ಕಳ್ಳರು.ಶೇ.80ರಷ್ಟು ಲೂಟಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಗ್ಯಾರಂಟಿ ಹೆಸರಲ್ಲಿ ಜನರಿಗೆ ದ್ರೋಹ ಬಗೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.