ಮುಡಾ ಅಕ್ರಮ ಪ್ರಕರಣ: ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಯತ್ನ; ಆರ್.ಅಶೋಕ್, ಅರಗ ಜ್ಞಾನೇಂದ್ರ ಸೇರಿ ಹಲವು ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಬಿಜೆಪಿ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಮಾಜಿ ಸಚಿವ ಅರಗ ಜ್ಞಾನೇಂದ್ರ, ಶಾಸಕ ಅರವಿಂದ್ ಬೆಲ್ಲದ್ ಹಾಗೂ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಧಿಕ್ಕಾರ ಕೂಗಿದ್ದಾರೆ.

ಈ ವೇಳೆ ಮಾತನಾಡಿದ ಆರ್.ಅಶೋಕ್, ಮುಡಾದಲ್ಲಿ ಭಾರೀ ಹಗರಣ ನಡೆದಿದೆ. ಒಬ್ಬೊಬ್ಬರಿಗೆ 15 ಸೈಟ್ ಗಳನ್ನು ಹಂಚಿದ್ದಾರೆ. ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ. ಮಂಡ್ಯದಲ್ಲಿ ನಡೆದಿದ್ದ ನಿವೇಶನ ಹಂಚಿಕೆ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸಿದಂತೆ ಮುಡಾ ಅಕ್ರಮ ಕೇಸ್ ನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

ವಾಲ್ಮೀಕಿ ನಿಗಮದಲ್ಲಿ ಅಕ್ರಮ, ಮುಡಾ ಅಕ್ರಮ ಸೇರಿದಂತೆ ಕಾಂಗ್ರೆಸ್ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ. ಈಗಾಗಲೇ ಸರ್ಕಾರದ ಒಂದು ವಿಕೆಟ್ ಪತನವಾಗಿದೆ. ಮತ್ತೊಂದು ದೊಡ್ಡ ವಿಕೆಟ್ ಪತನವಾಗುವವರೆಗೂ ನಾವು ಬಿಡಲ್ಲ. ಬಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕುವ ಮೂಲಕ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ತಡೆದಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಆರ್.ಅಶೋಕ್, ಮಾಜಿ ಸಚಿವ ಅರಗ ಜ್ಞಾನೇಂದ್ರ, ಶಾಸಕ ಅರವಿಂದ ಬೆಲ್ಲದ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಾಹನಗಳಲ್ಲಿ ತುಂಬಿ ಕರೆದೊಯ್ದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read