ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಾಸ್ ಪಡೆದಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ನಾಯಕರು, ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಶಾಸಕರಾದ ಅರವಿಂದ್ ಬೆಲ್ಲದ್, ಮಹೇಶ್ ಟೆಂಗಿನಕಾಯಿ ನೇತೃತ್ವದಲ್ಲಿ ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಹುಬ್ಬಳ್ಳಿ ಏರ್ ಪೋರ್ಟ್ ಮೂಲಕ ಬೆಳಗಾವಿ ಜಿಲ್ಲೆಯ ಸವದತ್ತಿಗೆ ತೆರಳುತ್ತಿದ್ದು, ಈ ವೇಳೆ ಸಿಎಂ ಸಾಗುವ ಮಾರ್ಗ ಗೋಕುಲ್ ರಸ್ತೆಯ ಅಕ್ಷಯ್ ಪಾರ್ಕ್ ಬಳಿ ಬಿಜೆಪಿ ನಾಯಕರು ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಅಲ್ಲದೇ ಕೆಲ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಕಾರಿಗೆ ಕಪ್ಪು ಬಟ್ಟೆ ಪ್ರದರ್ಶನ ಮಾಡಿದ್ದಾರೆ.
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಬಿಜೆಪಿ ನಯಕರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಸಿಎಂ ಸಾಗುವ ಮಾರ್ಗದಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.