ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿರುವ ರಾಜ್ಯ ಬಿಜೆಪಿ ನಾಯಕರು ವಿಧನಸೌಧದಲ್ಲಿ ಸಿಎಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಶಾಸಕರು, ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ವಿಧಾನಸೌಧದ ದಕ್ಷಿಣ ದ್ವಾರದ ಮೂಲಕ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಆರ್.ಅಶೋಕ್, ಶಾಸಕ ಮುನಿರತ್ನ ಕೈಯಲ್ಲಿ ಬೀಗ ಹಿಡಿದು ಮುಖ್ಯಮಂತ್ರಿಗಳ ಕಚೇರಿಯತ್ತ ಮುನ್ನುಗ್ಗುತ್ತಿದ್ದಂತೆ ಪೊಲೀಸರು ವಿಧಾನಸೌಧದ ದಕ್ಷಿಣ ದ್ವಾರದ ಬಾಗಿಲು ಮುಚ್ಚಿದ್ದಾರೆ.
ಈ ವೇಳೆ ಬಿಜೆಪಿ ನಾಯಕರು ಹಾಗೂ ಪೊಲೀಸರ ನಡುವೆ ನೂಕಾಟ ತಳ್ಳಾಟ ನಡೆದಿದೆ. ಬಿಜೆಪಿ ನಾಯಕರು ವಿಧಾನಸೌಧದ ದಕ್ಷಿಣ ದ್ವಾರಕ್ಕೇ ಬೀಗ ಹಾಕುವುದಾಗಿ ಹೇಳಿ ಬೀಗಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ತಡೆದಿದ್ದಾರೆ. ಬಳಿಕ ವಿಧಾನಸೌಧದ ದಕ್ಷಿಣ ದ್ವಾರದ ಮೆಟ್ಟಿಲುಗಳ ಮೇಲೆ ಕುಳಿತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೊಲೀಸರು ಹಲವು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.