ಉಡುಪಿ: ಹಾಲಿನ ದರ ಹಾಗೂ ತೈಲ ದರ ಏರಿಕೆ ಖಂಡಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ವರುಣಾರ್ಭಟದ ನಡುವೆಯೂ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಕೊಡೆ ಹಿಡಿದುಕೊಂಡು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಹಾಲು ಹಾಗೂ ತೈಲ ದರ ಏರಿಕೆ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಮಳೆಯಲ್ಲಿಯೇ ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಪ್ರತಿಭಟನಾ ನಿರತರು ಯತ್ನಿಸಿದ್ದಾರೆ. ಡಿಸಿ ಕಚೇರಿ ಗೇಟ್ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಈ ವೇಳೆ ಕೆಲ ಕಾರ್ಯಕರ್ತರು ಗೇಟ್ ಮೇಲೆ ಹತ್ತಿ ಡಿಸಿ ಕಚೇರಿಗೆ ನುಗ್ಗಲು ಯತ್ನಿಸಿದ್ದಾರೆ. ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.
ಹಾಲಿನ ದರ ಏರಿಕೆ ಹಾಗೂ ಪೆಟ್ರೋಲ್, ಡೀಸೆಲ್ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಆಗ್ರಹಿಸಿದ್ದಾರೆ.